ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲಿ

| Published : Mar 24 2025, 01:18 AM IST

ಸಾರಾಂಶ

Let women become financially independent.

-ಮಹಿಳಾ ದಿನಾಚರಣೆಯಲ್ಲಿ ಸಂಸದ ಸಾಗರ ಖಂಡ್ರೆ ಕರೆ । ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ, ಮಾರಾಟ ಮೇಳ ಆರ್ಥಿಕ ಸ್ವಾವಲಂಬಿಯಾಗಿದ್ದರೆ ಸ್ವತಂತ್ರವಾಗಿ ಜೀವನ

----

ಕನ್ನಡಪ್ರಭವಾರ್ತೆ ಬೀದರ್‌

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮುಖ್ಯ ವಾಹಿನಿಗೆ ಬರಬೇಕೆಂದು ಸಂಸದ ಸಾಗರ ಈಶ್ವರ ಖಂಡ್ರೆ ಕರೆ ನೀಡಿದರು.

ಭಾನುವಾರ ನಗರದ ಪ್ರತಾಪ ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ ಹಾಗೂ ಜಿಲ್ಲಾ ಪಂಚಾಯತ್‌ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಧೃಡರಾಗುವುದು ಬಹಳ ಮುಖ್ಯವಾಗಿದೆ ಎಂದರು.

ಒಂದು ವೇಳೆ ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದರೆ ಸ್ವತಂತ್ರವಾಗಿ ಜೀವನ ಮಾಡಬಹುದು ಮತ್ತು ಯಾವುದೇ ಕಟ್ಟುಪಾಡುಗಳಿಗೆ ಒಳಗಾಗಬೇಕಿಲ್ಲ. ಅದಕ್ಕಾಗಿಯೇ ಕರ್ನಾಟಕದಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಪಂಚ ಗ್ಯಾರಂಟಿಗಳನ್ನು ನೀಡಿದೆ. ಮಹಿಳೆಯರಿಗೆ ಉಚಿತವಾಗಿ ಬಸ್‌ ಸಂಚಾರ, ಮಾಸಿಕ 2000 ಸಹಾಯ ಧನ, 10 ಕಿಲೋ ಅಕ್ಕಿ, 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುತ್ತಿದೆ. ಇದರಿಂದಾಗಿ ಮಹಿಳೆಯರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

..ಬಾಕ್ಸ್‌..

ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ

ಆರ್ಥಿಕ ಸ್ವಾವಲಂಬನೆ, ಉದ್ಯೋಗಾವಕಾಶ, ಉದ್ಯಮಶೀಲತೆ ಮತ್ತು ಶಿಕ್ಷಣವೇ ನಿಜವಾದ ಸಬಲೀಕರಣಕ್ಕೆ ದಾರಿ ಮಾಡಿಕೊಡುತ್ತದೆ. ಇಂತಹ ವಸ್ತು ಪ್ರದರ್ಶನಗಳು ಮತ್ತು ಮಾರುಕಟ್ಟೆ ಮೇಳಗಳು ಗ್ರಾಮೀಣ ಮಹಿಳೆಯರಿಗೆ ತಮ್ಮ ಉತ್ಪನ್ನಗಳನ್ನು ಪ್ರಚಾರ ಮತ್ತು ಮಾರಾಟ ಮಾಡಲು ಉತ್ತಮ ವೇದಿಕೆಯಾಗುತ್ತದೆ ಎಂದು ಅವರು ತಿ‍ಳಿಸಿದರು.

ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ ಬದೋಲೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸಂಸದ ಸಾಗರ ಈಶ್ವರ ಖಂಡ್ರೆ ಅವರು ಉತ್ತಮವಾಗಿ ಕಾರ್ಯ ಚಟುವಟಿಕೆ ನಡೆಸಿದ ಹುಮನಾಬಾದ್‌ ತಾಲೂಕಿನ ಘೋಡವಾಡಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟ ಘೋಡವಾಡಿ (ಪ್ರಥಮ ಸ್ಥಾನ), ಭಾಲ್ಕಿ ತಾಲೂಕಿನ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಒಕ್ಕೂಟ ನಿಟ್ಟೂರ್‌ (ದ್ವಿತೀಯ ಸ್ಥಾನ), ಚಿಟಗುಪ್ಪ ತಾಲೂಕಿನ ಮಂಗಲಗಿ ಗ್ರಾಮ ಪಂಚಾಯತ್‌ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ (ತೃತೀಯ ಸ್ಥಾನ) ಬಹುಮಾನ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ. ನಾರಾಯಣರಾವ್‌, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಮೃತರಾವ್‌ ಚಿಮಕೊಡೆ, ಬೀದರ್‌ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಜಿಲ್ಲಾ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಸುವರ್ಣಾ, ರಜಿಯಾ ಬಳಬಟ್ಟಿ, ಗೀತಾ ವಾಣಿ ಸೇರಿದಂತೆ ಇತರೆ ಅಧಿಕಾರಿಳು ಉಪಸ್ಥಿತರಿದ್ದರು.

-----

ಫೈಲ್‌ 23ಬಿಡಿ7