ರಾಷ್ಟ್ರ ಕಟ್ಟುವಲ್ಲಿ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕರು ಸರ್ಕಾರದಿಂದ ದೊರೆಯುವ ಯೋಜನೆ, ಸೌಲಭ್ಯಗಳ ಬಗ್ಗೆ ಅರಿತು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಿಜೆಎಂ ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಭಾರ ಸದಸ್ಯ ಕಾರ್ಯದರ್ಶಿ ಕವಿತಾ ಎಸ್.ಉಂಡೋಡಿ ಹೇಳಿದರು.

ಕಾರವಾರ: ರಾಷ್ಟ್ರ ಕಟ್ಟುವಲ್ಲಿ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕರು ಸರ್ಕಾರದಿಂದ ದೊರೆಯುವ ಯೋಜನೆ, ಸೌಲಭ್ಯಗಳ ಬಗ್ಗೆ ಅರಿತು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಿಜೆಎಂ ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಭಾರ ಸದಸ್ಯ ಕಾರ್ಯದರ್ಶಿ ಕವಿತಾ ಎಸ್.ಉಂಡೋಡಿ ಹೇಳಿದರು.

ಶುಕ್ರವಾರ ತಾಪಂ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ನ್ಯಾಯವಾದಿಗಳ ಸಂಘ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಕಾರ್ಮಿಕ ಇಲಾಖೆಯ ಮೂಲಕ ಪಿಂಚಣಿ ಸೌಲಭ್ಯ, ಕುಟುಂಬ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ ಇತರೆ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡಲಾಗುತ್ತಿದ್ದು, ಕಾರ್ಮಿಕರು ಈ ಯೋಜನೆ, ಸೌಲಭ್ಯಗಳನ್ನು ಹಾಗೂ ಹಕ್ಕುಗಳನ್ನು ಅರಿತುಕೊಡು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ಸಾಗಿಸಬೇಕು. ಕಾರ್ಮಿಕರು ತಮ್ಮ ಮಕ್ಕಳನ್ನು ಕಾರ್ಮಿಕರನ್ನಾಗಿಸದೇ ಉನ್ನತ ಶಿಕ್ಷಣ ನೀಡಿ, ಉನ್ನತ ಹುದ್ದೆ ಪಡೆದುಕೊಳ್ಳುವಂತೆ ರೂಪಿಸಿ, ರಾಷ್ಟ್ರ ನಿರ್ಮಾಣದಲ್ಲಿ ಅವರದೇ ಆದ ಕೊಡುಗೆ ನೀಡುವಂತೆ ಮಾಡಬೇಕು. ಪ್ರತಿಯೊಬ್ಬರು ಮಾನವೀಯತೆ ಮೌಲ್ಯಗಳನ್ನು ರೂಢಿಸಿಕೊಂಡು ತಮ್ಮ ಮಕ್ಕಳಲ್ಲಿ ಮಾನವೀಯ ಗುಣಗಳನ್ನು ಬೆಳಸುವಂತೆ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ, ಕಾರ್ಮಿಕರಲ್ಲಿ ಸಂಘಟಿತ ಹಾಗೂ ಅಸಂಘಟಿತ ಎಂಬ ಎರಡು ವಲಯಗಳಿದ್ದು, ಅಸಂಘಟಿತ ವಲಯ ಕಾರ್ಮಿಕರಿಗೆ ಭದ್ರತೆ ಮತ್ತು ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ 2007ರಲ್ಲಿ ಜಾರಿಗೆ ತಂದಿದೆ. ಅಗತ್ಯ ದಾಖಲಾತಿಗಳೊಂದಿಗೆ ಕಾರ್ಮಿಕ ಇಲಾಖೆ ನೋಂದಣಿ ಮಾಡಿಸಿಕೊಂಡಲ್ಲಿ ಅವರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಗುವುದು. ಅಪಘಾತ ಪರಿಹಾರ, ಮದುವೆ ಸಹಾಯಧನ, ಶೈಕ್ಷಣಿಕ ಸಹಾಯ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. 2026ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ 1,852 ಫಲಾನುಭವಿಗಳಿಗೆ ₹10,00,55,946 ಧನ ಸಹಾಯ ನೀಡಲಾಗಿದೆ. ಬಾಲ್ಯ ಕಾರ್ಮಿಕರು ಕಂಡು ಬಂದಲ್ಲಿ 1098 ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿ, ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರಯತ್ನಿಸೋಣ ಎಂದರು.

ಪ್ಯಾನಲ್ ವಕೀಲ ಎ.ಆರ್.ಬಿ. ಡಿಸೋಜಾ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತು ಉಪನ್ಯಾಸ ನೀಡಿ, ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಬಾಲ್ಯದಲ್ಲೇ ಕೈಗಾರಿಕೆಗಳಲ್ಲಿ ದುಡಿಯಲು ಕಳುಹಿಸುತ್ತಿದ್ದಾರೆ, ಬಾಲ್ಯ ಕಾರ್ಮಿಕ ರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆ ಮತ್ತು ಕಾಯ್ದೆಯನ್ನು ಅನುಷ್ಠಾನ ಜಾರಿಗೆ ತಂದಿದೆ. 14 ವರ್ಷದೊಳಗಿನ ಬಾಲ ಕಾರ್ಮಿಕ ಹಾಗೂ 14 ವರ್ಷದಿಂದ 18 ಕಿಶೋರ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ ಶಿಕ್ಷೆ ಮತ್ತು ದಂಡ ವಿಧಿಸಲಾಗವುದು. ಒಂದು ವೇಳೆ ಜೀವನ ಸಾಗಿಸಲು ಅಥವಾ ಕುಟುಂಬಿಕ ಅವಶ್ಯಕತೆಗೆ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಅವರಿಗೆ ಸುರಕ್ಷತೆ, ರಕ್ಷಣೆ, ಸುಸಚ್ಚಿತವಾದ ವ್ಯವಸ್ಥೆ ಕಲ್ಪಿಸಬೇಕು. ಕಾರ್ಮಿಕರು ಶೋಷಣೆಗೆ ಒಳಗಾಗಿರುವುದು ಕಂಡು ಬಂದಲ್ಲಿ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅವರು ಜೀವನ ರೂಪಿಸಿಕೊಳ್ಳಲು ಸಹಕರಿಯಾಗಿ ಎಂದರು. ಈ ಸಂದರ್ಭದಲ್ಲಿ ಕಾರ್ಮಿಕರಿಗೆ ಸುರಕ್ಷಿತ ಪರಿಕರಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಂತೋಷ ವಿ. ಭಾಗವತ, ಕಾರ್ಮಿಕ ಇಲಾಖೆಯ ಅಧಿಕಾರಿ ಸಿಬ್ಬಂದಿ, ಕಾರ್ಮಿಕರು ಮತ್ತಿತರರು ಇದ್ದರು. ಕಾರ್ಮಿಕ ನಿರೀಕ್ಷಕ ಡಿ.ಎಂ. ವೆಂಕಟೇಶ ಬಾಬು ನಿರೂಪಿಸಿದರು.