ಸಾರಾಂಶ
ರಾಜ್ಯದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ದೀಪಾವಳಿಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿಗೆ ಅವಕಾಶ ನೀಡಲಾಗುವುದು.
ಹೊಸಪೇಟೆ: ರಾಜ್ಯದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಲಾಗಿದ್ದು, ದೀಪಾವಳಿಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಹಸಿರು ಪಟಾಕಿಗೆ ಅವಕಾಶ ನೀಡಲಾಗುವುದು. ರಾಸಾಯನಿಕ ಪಟಾಕಿ ಬಳಕೆಗೆ ಅವಕಾಶ ನೀಡಲಾಗುವುದಿಲ್ಲ. ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಮೂಲಕ ನಿರ್ಮಲ ಕರ್ನಾಟಕಕ್ಕೆ ಎಲ್ಲರೂ ಪಣತೋಡೋಣ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಿ 50 ವರ್ಷಗಳಾಗಿವೆ. ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿರ್ಮಲ ಕರ್ನಾಟಕಕ್ಕಾಗಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಸ್ಥಳೀಯ ಸಂಸ್ಥೆಗಳು ತ್ಯಾಜ್ಯ ನೀರು ಸಂಸ್ಕರಣೆ ಮಾಡದೇ ಕಲುಷಿತ ನೀರನ್ನು ಕೆರೆ, ನದಿಗಳಿಗೆ ಬಿಡುತ್ತಿದ್ದರೆ; ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಮನುಕುಲದ ಒಳಿತಿಗಾಗಿ ನಾವು ಪರಿಸರ ಕಾಳಜಿ ಹೊಂದೋಣ ಎಂದರು.ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮಾತನಾಡಿ, ಇಡೀ ದೇಶದಲ್ಲಿ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಂಬರ್ ಒನ್ ಸ್ಥಾನದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಆಚರಣೆ ಮಾಡುತ್ತಿದ್ದು, ಇಡೀ ರಾಜ್ಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ಪರಿಸರ ಪ್ರೇಮಿಗಳಿಗೆ ಪ್ರಶಸ್ತಿ ಮತ್ತು ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜನೆ ಮಾಡಲಾಗುತ್ತಿದೆ. ವಿಜಯನಗರ ಜಿಲ್ಲೆಯಲ್ಲಿ 156 ಕೈಗಾರಿಕೆಗಳಿವೆ. ಕೊಪ್ಪಳ ಜಿಲ್ಲೆಯಲ್ಲಿ 490 ಕೈಗಾರಿಕೆಗಳಿವೆ. ಈ ಕೈಗಾರಿಕೆಗಳಲ್ಲಿ ಕಾಲ ಕಾಲಕ್ಕೆ ಪರಿಶೀಲನೆ ನಡೆಸಲಾಗುತ್ತಿದೆ. ಕಲ್ಯಾಣಿ, ಕೆರೆ, ಹಳ್ಳ ಸಂರಕ್ಷಣೆಗೂ ಒತ್ತು ನೀಡಲಾಗಿದೆ ಎಂದರು.ಶಾಸಕ ಎಚ್.ಆರ್. ಗವಿಯಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಸದರಾದ ಈ. ತುಕಾರಾಂ, ರಾಜಶೇಖರ ಹಿಟ್ನಾಳ, ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್, ಕೃಷ್ಣ ನಾಯ್ಕ, ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಹಿಟ್ನಾಳ, ವಿಜಯನಗರ ಎಸ್ಪಿ ಎಸ್. ಜಾಹ್ನವಿ, ಜಿಪಂ ಸಿಇಒ ಅಕ್ರಂ ಅಲಿ ಷಾ, ಪರಿಸರ ಇಲಾಖೆ ಅಧಿಕಾರಿಗಳು ಮತ್ತಿತರರಿದ್ದರು.
ಪರಿಸರ ಸಂರಕ್ಷಣೆಗೆ ಒತ್ತು ನೀಡಿದವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ಮತ್ತು ಪ್ರಬಂಧ ಬರೆದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.