ಸಾರಾಂಶ
ಗದಗ: ಗದಗ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸೂಕ್ತ ವಾತಾವರಣವಿದ್ದು, ತೋಟಗಾರಿಕೆ ಜಿಲ್ಲೆಯಾಗಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ವಿವಿಧೆಡೆ ಮೆಣಸಿನಕಾಯಿ, ಈರುಳ್ಳಿ, ಮಾವು, ಬಾಳೆ, ದ್ರಾಕ್ಷಿ, ದಾಳಿಂಬೆ ಬೆಳೆಯಲಾಗುತ್ತಿದ್ದು ಅದರಲ್ಲಿಯೂ ಮುಂಡರಗಿ ಹಾಗೂ ಶಿರಹಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಆಯಾ ಪ್ರದೇಶದ ಸಂಭಾವ್ಯತೆಯನ್ನು ಅರಿತುಕೊಂಡು ಯಾವ ತೋಟಗಾರಿಕೆ ಬೆಳೆ ಬೆಳೆದರೆ ಸೂಕ್ತವಾಗುತ್ತದೆ ಎಂದು ಪರಿಶೀಲಿಸಿ 60 ದಿನಗಳೊಳಗೆ ಡಿಪಿಆರ್ ಸಿದ್ಧಪಡಿಸಿ ಸಲ್ಲಿಸಬೇಕು.
ಆನಂತರ ಮ್ಯಾಪಿಂಗ್ ಮಾಡಿ ರೈತರು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಈ ಕುರಿತು ತರಬೇತಿ ನೀಡಿದರೆ ತೋಟಗಾರಿಕೆಯಲ್ಲಿ ಅತ್ಯುನ್ನತ ಫಲಿತಾಂಶ ಕಾಣಬಹುದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಮಹತ್ವಪೂರ್ಣ ಅಭಿವೃದ್ಧಿಗೆ ಪ್ರಾಶಸ್ತ್ಯ ಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿವರ್ಗ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.ಯೋಜನೆಗಳ ಅನುಷ್ಠಾನ: ಬಡಜನರ, ದೀನದಲಿತರ, ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ. ಯೋಜನೆಯ ಸ್ಪಷ್ಟತೆಯನ್ನು ನಿಖರವಾಗಿ ತಿಳಿದುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯ ಅರ್ಹರಿಗೆ ತಲುಪಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು. ಬಡಜನರು ಆರ್ಥಿಕವಾಗಿ ಸಾಮಾಜಿಕವಾಗಿ ಮುಂದೆ ಬರಲು ಉದ್ದೇಶ ಇಟ್ಟುಕೊಂಡು ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ವಿವಿಧ ಇಲಾಖೆಗಳಿಂದ ಅರ್ಹರಿಗೆ ಕಾನೂನು ಚೌಕಟ್ಟಿನಲ್ಲಿ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದರೂ ಕೆಲವೊಂದು ಸಂದರ್ಭಗಳಲ್ಲಿ ಕಾನೂನಿನ ಕ್ರಮಗಳ ಹಾಗೂ ಹೆಚ್ಚಿನ ಮಾರ್ಗದರ್ಶನ ಪಡೆದು ಅದರಲ್ಲಿ ಸೂಕ್ತ ಮಾರ್ಪಾಡುಗಳೊಂದಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ. ಯೋಜನೆಯ ಅನುಷ್ಠಾನಕ್ಕೆ ವಿನಾಕಾರಣ ವಿಳಂಬ ಹಾಗೂ ಉದಾಸೀನ ತೋರಬಾರದು. ಹಾಗೆ ಮಾಡಿದರೆ ನಮ್ಮಷ್ಟಕ್ಕೆ ನಾವೇ ಆತ್ಮವಂಚನೆ ಮಾಡಿಕೊಂಡಂತಾಗುತ್ತದೆ ಎಂದರು.
ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ: ಜಿಲ್ಲೆಯಲ್ಲಿ ಮಳೆಯ ನೀರು ಸದ್ಬಳಕೆ ಮಾಡುವ ಕುರಿತು ಯೋಜನೆ ರೂಪಿಸಬೇಕು ಹಾಗೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳ ಹಾಗೂ ಸಮರ್ಪಕವಾಗಿ ನೀರು ದೊರೆಯುವ ಸ್ಥಳಗಳ ಪಟ್ಟಿ ಮಾಡಿ ನೀರಿನ ಪರಿಸ್ಥಿತಿಯನ್ನು ಅವಲೋಕಿಸುವ ಒಂದು ತಂಡ ಮಾಡಬೇಕು. ಈ ಕುರಿತು ತಹಸೀಲ್ದಾರರು ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಜೆಜೆಎಂ ಕಾಮಗಾರಿ: ಜಲಜೀವನ ಮಿಷನ್ ಯೋಜನೆಯ 336 ಕಾಮಗಾರಿಗಳಲ್ಲಿ 200 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಜಿಪಂ ಸಿಇಒ ಭರತ್ ಎಸ್. ತಿಳಿಸಿದರು. ಜಲಜೀವನ ಮಿಷನ್ (ಜೆಜೆಎಂ) ಅನುಷ್ಠಾನವಾಗಿದ್ದರೂ ಮನೆ ಮನೆಗೆ ನೀರು ಸಮರ್ಪಕವಾಗಿ ಸರಬರಾಜು ಆಗುತ್ತಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಬೇಕು. ಅಲ್ಪಾವಧಿ ಟೆಂಡರ್ ಕರೆದು ಬಾಕಿ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಂಸದರು ಸೂಚಿಸಿದರು.
ಕೃಷಿ ಇಲಾಖೆ ಹಾಗೂ ಸಹಕಾರ ಇಲಾಖೆಗಳು ಸಮನ್ವಯ ಸಾಧಿಸುವಂತೆ ಜಿಲ್ಲಾಧಿಕಾರಿ ನಿಗಾ ವಹಿಸಬೇಕು. ಸಹಕಾರ ಸಂಘಗಳ ಮೂಲಕ ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸರಬರಾಜು ಆಗಬೇಕು. ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯ ಸರಿಪಡಿಸಲು ಜಿಲ್ಲಾಧಿಕಾರಿ ವಾರಕ್ಕೊಂದು ಸಾರಿಯಾದರೂ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರೊಂದಿಗೆ ಸಭೆ ಜರುಗಿಸಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಜೆಜೆಎಂ ಯೋಜನೆಯಡಿ ಸಮರ್ಪಕ ನೀರು ಸರಬರಾಜಿನ ಕುರಿತು ಪರಿಶೀಲನೆ ನಡೆಸಬೇಕು. ಪೈಪ್ ಒಡೆದು ನೀರು ಪೋಲಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಶೇ. 65ರಷ್ಟು ಬಿತ್ತನೆಯಾಗಿದೆ. ಜಿಲ್ಲೆಯಲ್ಲ್ಲಿಹೆಸರು ಪ್ರಮುಖ ಬೆಳೆಯಾಗಿದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವವಿಲ್ಲ ಎಂದು ತಿಳಿಸಿದರು.ಉದ್ಯೋಗ ಖಾತ್ರಿ ಯೋಜನೆ, ಫಸಲ ಬಿಮಾ ಯೋಜನೆ, ಎನ್.ಎಚ್.ಎಂ., ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ಜರುಗಿತು.
ವಿಪ ಸದಸ್ಯ ಎಸ್.ವಿ. ಸಂಕನೂರ. ಶಿರಹಟ್ಟಿ ಶಾಸಕ ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ., ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.