ಸಾರಾಂಶ
ಕೊಪ್ಪಳ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ರಾಜ್ಯ ಸರ್ಕಾರದಿಂದ ಕಳೆದ 9 ತಿಂಗಳುಗಳಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ, ಮಹಿಳೆಯರು, ಯುವಕರು, ಪಡಿತರ ಚೀಟಿದಾರರಿಗೆ ಪಂಚ ಗ್ಯಾರಂಟಿಗಳ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸರ್ಕಾರಿ ಸಾರಿಗೆಯಲ್ಲಿ ಜೂನ್ ಇಂದ ಇಲ್ಲಿಯವರೆಗೆ 2.36 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 2,64,807 ಕುಟುಂಬಗಳು ನೋಂದಣಿ ಮಾಡಿಕೊಂಡಿದ್ದು, ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯ 3,01,246 ಫಲಾನುಭವಿಗಳಿಗೆ ₹285 ಕೋಟಿ ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೂ 2,606 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಪದವೀಧರರಿಗೆ ಪ್ರತಿ ಮಾಹೆ ₹3000 ಹಾಗೂ ಡಿಪ್ಲೊಮಾ ಹೊಂದಿದವರಿಗೆ ₹1500 ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ, ಬಿಪಿಎಲ್ ಸೇರಿದಂತೆ ಒಟ್ಟು 3,28,533 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ಒಟ್ಟು 11,83,343 ಸದಸ್ಯರಿಗೆ ಸರ್ಕಾರದ ಎನ್‌ಎಫ್‌ಎಸ್‌ಎ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಹೆಚ್ಚುವರಿಯಾಗಿ ನೀಡಬೇಕಾದ 5ಕೆ.ಜಿ ಅಕ್ಕಿಗೆ ಪ್ರತಿ ಕೆ.ಜಿ ಗೆ 34 ರೂ. ರಂತೆ ಪ್ರತಿ ಸದಸ್ಯರಿಗೆ ₹170ರಂತೆ ಜುಲೈ ಮಾಹೆಯಿಂದ ಇಲ್ಲಿಯವರೆಗೆ ಒಟ್ಟು 2,89,094 ಪಡಿತರ ಕುಟುಂಬಗಳ ಮುಖ್ಯಸ್ಥರ ಖಾತೆಗೆ ಡಿಬಿಟಿ ಮೂಲಕ ₹102.58 ಕೋಟಿ ಜಮೆ ಮಾಡಲಾಗಿದೆ ಎಂದರು.ಬೆಳೆ ಪರಿಹಾರಕ್ಕೆ ಪ್ರಸ್ತಾವನೆ:
ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಕೃಷಿ, ತೋಟಗಾರಿಕೆ ಬೆಳೆಗಳಲ್ಲಿ ನೀರಾವರಿ ಬೆಳೆಗಳನ್ನು ಹೊರತುಪಡಿಸಿ 2,50,061 ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ಇದಕ್ಕೆ ಬೇಕಾಗುವ ₹216.41 ಕೋಟಿ ಬೆಳೆ ಪರಿಹಾರದ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಮಧ್ಯಂತರ ಪರಿಹಾರವಾಗಿ 33,375 ಫಲಾನುಭವಿಗಳಿಗೆ ₹26.17 ಕೋಟಿ ಬೆಳೆವಿಮೆ ಮಂಜೂರಾಗಿದೆ ಎಂದರು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ಈ ಭಾಗದ ಸರ್ವತೋಮುಖ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ತುಂಬ ಅನುಕೂಲವಾಗಿದೆ. 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆಯಲ್ಲಿ ಜಿಲ್ಲೆಗೆ ಮೈಕ್ರೋ ವಲಯದಲ್ಲಿ ₹205.14 ಕೋಟಿ ಹಾಗೂ ಮ್ಯಾಕ್ರೋ ವಲಯದಲ್ಲಿ ₹89.20 ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ಅನುಮೋದಿಸಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಅಮೃತ್ ಯೋಜನೆ 2.0 ಅಡಿಯಲ್ಲಿ ಕೊಪ್ಪಳ ನಗರ ಮತ್ತು ಭಾಗ್ಯನಗರ ಪಟ್ಟಣದಲ್ಲಿ ಸಂಯುಕ್ತ ಕುಡಿಯುವ ನೀರಿನ ಸರಬರಾಜು ಯೋಜನೆಯ ಸಲುವಾಗಿ ₹138.47 ಕೋಟಿ ಅನುದಾನಕ್ಕೆ ಅನುಮೋದನೆ ದೊರಕಿದೆ. ತುಂಗಭದ್ರಾ ಜಲಾಶಯ ಮೂಲದಿಂದ ಕಾರಟಗಿ ಮತ್ತು ಕನಕಗಿರಿ ಪಟ್ಟಣಗಳಿಗೆ ಸಂಯುಕ್ತ ಕುಡಿಯುವ ನೀರಿನ ಸರಬರಾಜು ಯೋಜನೆಯ ಸಲುವಾಗಿ ₹204.57 ಕೋಟಿಗೆ ಅನುಮೋದನೆ ದೊರಕಿದೆ. ಇದರಂತೆ ಜಿಲ್ಲೆಯ ರಸ್ತೆ ಅಭಿವೃದ್ಧಿ, ವಿದ್ಯಾರ್ಥಿಗಳ ವಸತಿ ನಿಲಯ, ಕಾಲೇಜುಗಳ ನಿರ್ಮಾಣಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದರು.ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸದ ಸಂಗಣ್ಣ ಕರಡಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರಿದ್ದರು.ಪಥಸಂಚಲನ:ಧ್ವಜಾರೋಹಣ ನಂತರ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ, ಸೇವಾದಳ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ವಿವಿಧ ಶಾಲಾ-ಕಾಲೇಜುಗಳ ಮಕ್ಕಳಿಂದ ಪಥಸಂಚಲನ ಹಾಗೂ ಸಚಿವ ಶಿವರಾಜ ತಂಗಡಗಿ ಅವರಿಗೆ ಗೌರವ ಸಲ್ಲಿಸಲಾಯಿತು. ಉತ್ತಮ ಪರೇಡ್ ಪ್ರದರ್ಶಿಸಿದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.ಸಾಧಕರಿಗೆ ಸನ್ಮಾನ:ಉತ್ತಮ ಆರೋಗ್ಯ ಸೇವೆ ನೀಡುವ ಮೂಲಕ ಸಾಧನೆ ಮಾಡಿದ ಕೊಪ್ಪಳ ನಗರದ ಕೆ.ಎಸ್ ಹೆಲ್ತಕೇರ್, ಗಂಗಾವತಿಯ ಪಾಟೀಲ್ ನರ್ಸಿಂಗ್ ಹೋಂ, ಕುಷ್ಟಗಿ ತಾಲೂಕು ಆಸ್ಪತ್ರೆ, ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರ ಮತ್ತು ಹನುಮನಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಮಾಣಪತ್ರ ವಿತರಿಸಲಾಯಿತು.ಗಣರಾಜ್ಯೋತ್ಸವ ನಿಮಿತ್ತ ಎಸ್.ಎಫ್.ಎಸ್ ಶಾಲೆ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಶಾಲಾ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯ ನೃತ್ಯ ಮಾಡಿ ಗಮನ ಸೆಳೆದರು.