ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮುಂಬಡ್ತಿಗೆ ಪ್ರಿಯಾಂಕ್ ಖರ್ಗೆ ಪತ್ರ

| Published : May 07 2025, 12:46 AM IST

ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮುಂಬಡ್ತಿಗೆ ಪ್ರಿಯಾಂಕ್ ಖರ್ಗೆ ಪತ್ರ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅಪರ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅಪರ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-2 ಹುದ್ದೆಗೆ ಮುಂಬಡ್ತಿ ನೀಡುತ್ತಿದ್ದು, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು , ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು/ವಿಲೀನಗೊಳಿಸುವ ಪ್ರಕ್ರಿಯೆಯನ್ನು ಅವರ ಆಯುಕ್ತರು ಜರುಗಿಸಲು ಸರ್ಕಾರದಿಂದ ಇದುವರೆಗೆ ಸೂಕ್ತ ಅಧಿಸೂಚನೆ ಅಥವಾ ನಿರ್ದೇಶನ ಬಂದಿರುವುದಿಲ್ಲ. ಇದರಿಂದಾಗಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಒಟ್ಟು 4083 (ಸ್ಥಳೀಯ ವೃಂದದ 3300 ಹಾಗೂ ಉಳಿದ ಮೂಲ ವೃಂದದ 783) ಮುಂಬಡ್ತಿಯಿಂದ ಭರ್ತಿ ಮಾಡಬೇಕಾದ ಹುದ್ದೆಗಳು ಭರ್ತಿಯಾಗದೇ ಖಾಲಿ ಉಳಿದಿರುತ್ತವೆ.

ಪುಸ್ತುತ ವಿಭಾಗದಲ್ಲಿ ಕಾರ್ಯನಿರತ 18,498 ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ ಬಹುತೇಕ ಶಿಕ್ಷಕರು ಪದವೀಧರರಾಗಿದ್ದು, ವೃತ್ತಿಪರ (ಡಿ.ಇಡಿ ಮತ್ತು ಬಿ.ಇಡಿ) ವಿದ್ಯಾರ್ಹತೆಯನ್ನು ಹೊಂದಿರುವುದರಿಂದ ಇವರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಸುಲಭವಾಗಿ ಮುಂಬಡ್ತಿ ನೀಡಲು /ವಿಲೀನಗೊಳಿಸಬಹುದಾಗಿದ್ದು, 2016 ರಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳನ್ನು ಸೃಜಿಸಿ ಅವುಗಳನ್ನು ಭರ್ತಿ ಮಾಡಲು ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಿ ಜಾರಿಗೆ ತರಲಾಗಿದೆ. ಸದರಿ ಹುದ್ದೆಗಳನ್ನು ಮುಂಬಡ್ತಿ ಮೂಲಕ ಭರ್ತಿ ಮಾಡಲು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅಧಿಸೂಚನೆ ಹೊರಡಿಸಿರುವುದಿಲ್ಲ.

ಅದಲ್ಲದೆ, ಸದರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಮುಂಬಡ್ತಿ ಮೂಲಕ ಭರ್ತಿ ಮಾಡಬಹುದಾದ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ 1,301 ಹುದ್ದೆಗಳಿಗೆ ಮುಂಬಡ್ತಿ ನೀಡಿ ಭರ್ತಿ ಮಾಡಬಹುದಾಗಿದ್ದು, ಇವುಗಳಲ್ಲಿ ಸ್ಥಳೀಯ ವೃಂದದ 1,047 ಹಾಗೂ ಉಳಿದ ಮೂಲ ವೃಂದದ 254 ಹುದ್ದೆಗಳಿರುತ್ತವೆಂದು ತಿಳಿದು ಬಂದಿರುತ್ತದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಜಿಲ್ಲಾ ಶಿಕ್ಷಕರಾಗಿ ಮುಂಬಡ್ತಿ ಅಥವಾ ವಿಲೀನ ಮಾಡಿ ಕೌನ್ಸಿಲಿಂಗ್‌ ಮೂಲಕ ಭರ್ತಿ ಮಾಡಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮುಂಬಡ್ತಿ ನೀಡಿ, ಅದೇ ದಿನದಂದು ಕೌನ್ಸಿಲಿಂಗ್‌ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿರುತ್ತದೆ.

ಕಲಬುರಗಿ ವಿಭಾಗದಲ್ಲಿ ಮುಂಬಡ್ತಿ ಕೋಟಾದಲ್ಲಿ ಖಾಲಿ ಇರುವ ಒಟ್ಟು 4,083 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳನ್ನು ಹಾಗೂ 1,301 ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಕೌನ್ಸಿಲಿಂಗ್‌ ಮೂಲಕ ಭರ್ತಿ ಮಾಡಲು ಅವಕಾಶವಿರುತ್ತದೆ. ಇದರಿಂದಾಗಿ ಕಲಬುರಗಿ ವಿಭಾಗದ ಒಟ್ಟು 5,384 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅನುಕೂಲವಾಗುತ್ತದೆ.

ಆದ್ದರಿಂದ, ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲು /ವಿಲೀನಗೊಳಿಸಲು ಹಾಗೂ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರು ತಮಗೆ ಸಲ್ಲಿಸಿರುವ ಪ್ರಸ್ತಾವನೆಯನ್ನು ತ್ವರಿತವಾಗಿ ನಿಯಮಾನುಸಾರ ಪರಿಶೀಲಿಸಿ, ಅನುಮೋದನೆ ನೀಡಲು ಕ್ರಮವಹಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಕೋರಿದ್ದಾರೆ.