ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್

| Published : Sep 18 2024, 01:46 AM IST

ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು ಎಂದು ಸಚಿವ ರಹೀಂ ಖಾನ್ ಹೇಳಿದರು.

ಬಳ್ಳಾರಿ: ಅನೇಕ ಮಹನೀಯರ ತ್ಯಾಗ-ಬಲಿದಾನ ಹಾಗೂ ಕೆಚ್ಚೆದೆಯ ಹೋರಾಟದ ಫಲದಿಂದ ಕಲ್ಯಾಣ ಕರ್ನಾಟಕ ಭಾಗ ಹೈದರಾಬಾದ್ ನಿಜಾಮನಿಂದ ವಿಮೋಚನೆಗೊಂಡಿತು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.

ಜಿಲ್ಲಾಡಳಿತ ವತಿಯಿಂದ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿಪೂರ್ವ ಕಾಲೇಜು ಮೈದಾನ ಆವರಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು. ದೇಶ ಸ್ವಾತಂತ್ರ್ಯ ಪಡೆದ ನಂತರವೂ ಹೈದರಾಬಾದ್ ನಿಜಾಮ ಮೀರ್ ಉಸ್ಮಾನ್ ಅಲಿಯ ಆಡಳಿತಕ್ಕೆ ಒಳಪಟ್ಟಿದ್ದ ಕಲ್ಯಾಣ ಕರ್ನಾಟಕ ಪ್ರದೇಶಗಳಲ್ಲಿ ಶಿಕ್ಷಣ, ಉದ್ಯೋಗ, ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳು ತಟಸ್ಥವಾಗಿದ್ದವು ಎಂದು ಹೇಳಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿನ ಜನರಿಗೆ ವಿಶೇಷ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನ ತಿದ್ದುಪಡಿ ಕಾಯ್ದೆ 371(ಜೆ) ಜಾರಿಗೊಳಿಸಲಾಗಿದ್ದು, ಇದರಿಂದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ವಿವಿಧ ಅಭಿವೃದ್ಧಿ ಕ್ಷೇತ್ರಗಳಲ್ಲಿ ಹೆಚ್ಚಿನ ಸೌಲಭ್ಯ ದಕ್ಕಿದಂತಾಗಿದೆ ಎಂದು ಹೇಳಿದರು.

ಬಳ್ಳಾರಿ ಜಿಲ್ಲೆಯು ಭವ್ಯ ಇತಿಹಾಸ ಹೊಂದಿದ್ದು, ಕೋಟೆ, ದೇವಾಲಯ, ಚರ್ಚ್, ಮಸೀದಿಗಳಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಂತ ಶಾಂತಿಯುತ ಜಿಲ್ಲೆಯಾಗಿದ್ದು, ಉಕ್ಕಿನ ನಗರ ಎಂದೇ ಪ್ರಸಿದ್ಧಿ ಪಡೆದಿದೆ ಹಾಗೂ ಕೈಗಾ ರೀಕರಣ ಅಭಿವೃದ್ಧಿ ಹೊಂದಿದೆ ಎಂದರು.

ಪೌರಾಡಳಿತ ಇಲಾಖೆಯಿಂದ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು, ಸ್ವಚ್ಚ ನಗರ, ಸ್ವಚ್ಛ ಗ್ರಾಮ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್‌ಗಳಿಂದ ಕೂಲಿ ಕಾರ್ಮಿಕರು, ರೈತರು, ಬಡವರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರಲ್ಲದೆ, ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಏರ್ಪಡಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ ಪ್ರಗತಿ ಪರಿಶೀಲನಾ ವರದಿ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಗುವುದು ಎಂದು ಸಚಿವ ರಹೀಂ ಖಾನ್ ತಿಳಿಸಿದರು.

ಸಂಸದ ಈ. ತುಕಾರಾಂ ಮಾತನಾಡಿದರು. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಸಿರಿಗೇರಿ ಪನ್ನರಾಜ್ ಅವರು ವಿಶೇಷ ಉಪನ್ಯಾಸ ನೀಡಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾದಾಗ ಬಳ್ಳಾರಿ ಜಿಲ್ಲೆಯ ಹೆಸರನ್ನು ಕೈಬಿಡಲಾಗಿತ್ತು. ಜಿಲ್ಲೆಯ ಜನರ ಹೋರಾಟದ ಫಲವಾಗಿ ಬಳ್ಳಾರಿ ಸೇರ್ಪಡೆಗೊಂಡಿತು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲೆಯ ಒಂಬತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ “ಕಲಿಕಾ ಆಸರೆ” ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ 371(ಜೆ) ಕುರಿತು ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ಡಾ. ಬಾಬು ಜಗ ಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್ಪಿ ಡಾ. ಶೋಭಾ ರಾಣಿ ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಎಡಿಸಿ ಮಹಮ್ಮದ್ ಝಬೇರ್.ಎನ್ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ-ಕಾಲೇಜು ಉಪನ್ಯಾಸಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.