ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರಆಹಾರ ಪದಾರ್ಥಗಳ ತಯಾರಿಕೆ, ವಿತರಣೆ, ಶೇಖರಣೆ ಮಾಡುವ ಎಲ್ಲಾ ಆಹಾರ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕಡ್ಡಾಯವಾಗಿ ಪರವಾನಗಿ ನೊಂದಣಿ ಪಡೆಯಬೇಕು. ಈ ನಿಟ್ಟಿನಲ್ಲಿ ಹೆಚ್ಚು ಜಾಗೃತಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಪಂ ಇಒ, ಗ್ರಾಪಂ ಅಧಿಕಾರಿಗಳು, ಆಹಾರ ಉದ್ದಿಮೆಗಳಿಗೆ ಅನುಮತಿ ಉದ್ದಿಮೆ ಪರವಾನಗಿ ನೀಡುವ ಮೊದಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಪರವಾನಗಿ, ನೋಂದಣಿ ಕಡ್ಡಾಯಗೊಳಿಸಬೇಕಿದೆ. ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕಿದೆ ಎಂದು ತಿಳಿಸಿದರು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ಅನಧಿಕೃತ ಆಹಾರ ತಯಾರಿಕಾ ಘಟಕಗಳಿಗೆ ಭೇಟಿ ಕೊಡಬೇಕು, ಅಧಿಕೃತ ಆಹಾರ ತಯಾರಿಕಾ ಘಟಕಗಳು, ಅಂಗಡಿಗಳು, ಉಗ್ರಾಣಗಳಿಗೂ ಭೇಟಿ ನೀಡಿ ಪರಿಶೀಲಿಸಬೇಕು. ಆಹಾರ ಮಾದರಿಗಳನ್ನು ಸಂಗ್ರಹಿಸಿ ನೊಂದಾಯಿತ ಆಹಾರ ಪ್ರಯೋಗ ಶಾಲೆಗೆ ಕಳುಹಿಸಿ ವಿಶ್ಲೇಷಣಾ ವರದಿಯನ್ನು ಪಡೆಯಬೇಕು ಎಂದರು. ರಸ್ತೆ ಬದಿ ವ್ಯಾಪಾರಿಗಳಿಗೆ ನಗರಸಭೆ, ಪುರಸಭೆ, ಸ್ಥಳೀಯ ಪಂಚಾಯಿತಿಗಳಿಂದ ಆರೋಗ್ಯ ತಪಾಸಣೆ, ಸ್ವಚ್ಚತೆ ಮತ್ತು ಗುಣಮಟ್ಟ ಆಹಾರ ಪದಾರ್ಥ ಬಳಕೆ ಮಾಡುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಾರ್ಗದರ್ಶನ ಮಾಡುವ ಕಾರ್ಯಗಳು ನಡೆಯಬೇಕು. ಆಹಾರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅವರು ತಿಳಿಸಿದರು. ಇದೇ ವೇಳೆ ಅತ್ಯುತ್ತಮವಾಗಿ ಸ್ವಚ್ಛತೆ ಕಾಪಾಡಿಕೊಂಡ ಉದ್ದಿಮೆದಾರರಿಗೆ ಪ್ರಮಾಣ ಪತ್ರಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಿತರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಂಕಿತ ಅಧಿಕಾರಿ ಡಾ. ಶಶಿಧರ್, ತಾಲೂಕು ಆಹಾರ ಸುರಕ್ಷತಾ ಅಧಿಕಾರಿ ಡಾ. ಶ್ರೀನಿವಾಸ್, ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸವಿತಾ, ಎಪಿಎಂಸಿ ಕಾರ್ಯದರ್ಶಿ ರವಿಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಶಂಕರ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.