ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಟಾಕಿ ಮಾರಾಟಕ್ಕೆ ನ.೬ರಿಂದ ೧೧ರವರೆಗೆ ಮಾತ್ರ ತಾತ್ಕಾಲಿಕ ಪರವಾನಗಿ ನೀಡಬೇಕು. ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಪೂರ್ವ ನಿಗದಿತ ಹಾಗೂ ಸುರಕ್ಷಿತ ಸ್ಥಳಗಳಲ್ಲಿಯೇ ಪಟಾಕಿ ಮಳಿಗೆ ಸ್ಥಾಪನೆಗೆ ಅವಕಾಶ ಕಲ್ಪಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಟಾಕಿ ಮಾರಾಟಕ್ಕೆ ನ.೬ರಿಂದ ೧೧ರವರೆಗೆ ಮಾತ್ರ ತಾತ್ಕಾಲಿಕ ಪರವಾನಗಿ ನೀಡಬೇಕು. ಸಾರ್ವಜನಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿ, ಪೂರ್ವ ನಿಗದಿತ ಹಾಗೂ ಸುರಕ್ಷಿತ ಸ್ಥಳಗಳಲ್ಲಿಯೇ ಪಟಾಕಿ ಮಳಿಗೆ ಸ್ಥಾಪನೆಗೆ ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾತ್ಕಾಲಿಕ ಪರವಾನಗಿ ಪಡೆದ ಮಳಿಗೆಗಳಲ್ಲಿ ಬೆಳಗ್ಗೆ ೮ ರಿಂದ ರಾತ್ರಿ ೮ರ ವರೆಗೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಬೇಕು. ಪರವಾನಗಿ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಅರ್ಜಿದಾರರು ಸೂಚಿಸುವ ಸ್ಥಳವನ್ನು ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಪರಿಶೀಲಿಸಿ, ಎಲ್ಲ ಸುರಕ್ಷತಾ ಮಾನದಂಡಗಳನ್ನು ಪೂರೈಸಿರುವುದು ಖಚಿತವಾದ ಬಳಿಕವೇ ಪರವಾನಗಿ ನೀಡಬೇಕು ಎಂದರು.
ಪಟಾಕಿ ಮಳಿಗೆಗಳನ್ನು ರಸ್ತೆ ಬದಿ, ಜನನಿಬಿಡ ಹಾಗೂ ವಸತಿ ಪ್ರದೇಶಗಳಲ್ಲಿ ಅಥವಾ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವ ಸ್ಥಳಗಳಲ್ಲಿ ಸ್ಥಾಪಿಸಲು ಅವಕಾಶ ನೀಡಬಾರದು. ಪ್ರತಿ ತಾಲೂಕಿನಲ್ಲಿ ಸುರಕ್ಷಿತ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ಸೂಕ್ತ ಸ್ಥಳಗಳನ್ನು ಪೂರ್ವಭಾವಿಯಾಗಿ ಗುರುತಿಸಿ. ಪೊಲೀಸ್ ಇಲಾಖೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ಮಳಿಗೆಗಳ ನಡುವೆ ನಿಗದಿತ ಅಂತರ, ತುರ್ತು ವಾಹನಗಳ ಸಂಚಾರಕ್ಕೆ ಅಗತ್ಯ ಸ್ಥಳಾವಕಾಶ, ಅಗ್ನಿಶಾಮಕ ಸಾಧನಗಳು ಹಾಗೂ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳು ಕಡ್ಡಾಯವಾಗಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಮಳಿಗೆ ನಿರ್ಮಾಣ ಹಾಗೂ ಪಟಾಕಿ ಸಂಗ್ರಹಣೆಯಲ್ಲಿ ನಿಗದಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದರು.
ಮಂಡ್ಯ ವಿಶ್ವವಿದ್ಯಾಲಯದ ಆವರಣ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲಿ ಕ್ರೆಡಾಂಗಣ, ಸರ್ಕಾರಿ ಮೈದಾನ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ಇತರೆ ಸೂಕ್ತ ಸ್ಥಳಗಳನ್ನು ಪರಿಶೀಲಿಸಬೇಕು. ಸ್ಥಳದ ಲಭ್ಯತೆ ಅಥವಾ ಅನುಕೂಲಕ್ಕಿಂತ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಪಟಾಕಿ ಮಳಿಗೆಗಳ ಸ್ಥಳವನ್ನು ಅಂತಿಮಗೊಳಿಸಬೇಕು ಎಂದು ನಿರ್ದೇಶನ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಧ್ಯಕ್ಷೆ ಡಾ.ಮೀರಾ ಶಿವಲಿಂಗಯ್ಯ, ಜಿಲ್ಲಾಧಿಕಾರಿ ಕಚೇರಿಯ ಯೋಜನಾ ನಿರ್ದೇಶಕ ಚಂದ್ರಶೇಖರ್, ತಹಸಿಲ್ದಾರ್ ವಿಶ್ವನಾಥ್, ಡಿವೈಎಸ್ಪಿ ಎಚ್.ಪಿ.ಸತೀಶ್, ಅಗ್ನಿಶಾಮಕ ದಳದ ಅಧಿಕಾರಿ ರಾಘವೇಂದ್ರ, ಪರಿಸರ ಇಲಾಖೆಯ ಹಿರಿಯ ಅಧಿಕಾರಿ ಗೀತಾ ಇತರರಿದ್ದರು.