ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್‌ ಆಗ್ರಹ

| Published : Mar 31 2024, 02:03 AM IST

ಸಚಿವ ಖರ್ಗೆಗೆ ಜೀವ ಬೆದರಿಕೆ ಪತ್ರ: ಆರೋಪಿಗಳ ಸೆರೆಗೆ ಸಾಗರ್‌ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಗೂ ಜಾತಿನಿಂದನೆ ಮಾಡಿದ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಡಾ. ಡಿ.ಜಿ. ಸಾಗರ್ ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಬದ್ಧವಾದ ಅಧಿಕಾರ ನಡೆಸುವ ಸರ್ಕಾರಕ್ಕೆ ಸವಾಲು ಎಂಬಂತೆ ಸಚಿವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ದುರ್ಬಲ ವರ್ಗದಿಂದ ಬಂದ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಅದೇ ಪತ್ರದಲ್ಲಿ ಅವರ ತಂದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು, ಜಾತಿ ನಿಂದನೆ ಕುರಿತು ಅವಮಾನಕರವಾಗಿ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೂ ಸಹ ಅವಹೇಳನ ಮಾಡಿದ್ದಾರೆ.

ಜೀವ ಬೆದರಿಕೆ ಹಾಕಿರುವ ಪತ್ರವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಆರೋಪಿಗಳನ್ನು ಮತ್ತು ಅವರ ಹಿಂದಿರುವ ವ್ಯಕ್ತಿಗಳನ್ನೂ ಸಹ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಇನ್ನು ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿ ನಂದಪ್ಪ ಮತ್ತು ಇನ್ನಿತರ 11 ಸಂಶೋಧನಾ ವಿದ್ಯಾರ್ಥಿಗಳ ಭವಿಷ್ಯವನ್ನು ಬಲಿ ತೆಗೆದುಕೊಳ್ಳುತ್ತಿರುವ ವಿತಂಡವಾದಿ ನಿರಂಕುಶಮತಿಯಾದ ಕುಲಪತಿಗಳ ಸರ್ವಾಧಿಕಾರಿ ನೀತಿ ಖಂಡನಾರ್ಹ. ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ನ್ಯಾಯಯುತವಾದ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ ಎಂದರು.

ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಲು ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸುರೇಶ್ ಹಾದಿಮನಿ, ಹೆಚ್. ಶಂಕರ್ ಅವರು ಉಪಸ್ಥಿತರಿದ್ದರು.