ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಅವರ ಪರ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚಿರಂತಿಮಠ ಅವರ ಪರ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.ಮೂಲತಃ ಬಾಗಲಕೋಟೆ ಅವರೇ ಆದ ಅರವಿಂದ ಲಿಂಬಾವಳಿ ಅವರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರ ಹೆಸರು ಘೋಷಣೆ ಬೆನ್ನಲ್ಲೇ, ಕ್ಷೇತ್ರಕ್ಕೆ ಭೇಟಿ ನೀಡಿದ ಲಿಂಬಾವಳಿ ಅವರು ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಇದೀಗ ಕಳೆದೆರಡು ದಿನಗಳಿಂದ ಕ್ಷೇತ್ರದಲ್ಲೇ ಬೀಡು ಬಿಟ್ಟು ಮತಯಾಚನೆಯಲ್ಲಿ ತೊಡಗಿದ್ದಾರೆ.
ಬಾಗಲಕೋಟೆ ನೂರು ವರ್ಷಕ್ಕೂ ಹಳೆಯದಾದ ಇತಿಹಾಸ ಪ್ರಸಿದ್ಧ ಕೊತ್ತಲಪ್ಪ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದ ಲಿಂಬಾವಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ನವನಗರದ ಪಾತ್ರೋಟಿ ಸಮಾಜದ ಪ್ರಮುಖರೊಂದಿಗೆ ಹಾಗೂ ಮುಚಕಂಡಿ, ಬೆನಕಟ್ಟಿ, ಕಮತಗಿ, ಶಿರೂರು ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮತಯಾಚಿಸಿದರು.ಈ ಸರ್ಕಾರ ಅಭಿವೃದ್ಧಿಶೂನ್ಯವಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅಹಿಂದ ನಾಯಕ ಎಂದು ಪದೇ ಪದೆ ಹೇಳಿಕೊಳ್ಳುತ್ತಾರೆ. ಅಹಿಂದ ಸಮುದಾಯಕ್ಕೆ, ದಲಿತ ಸಮುದಾಯಗಳಿಗೆ ಅನ್ಯಾಯ ಆಗಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ತಿಳಿಸಿದ್ದಾರೆ.
ಎಸ್ಸಿ-ಎಸ್ಟಿ ತ್ರಿಶಂಕು ಸ್ಥಿತಿಗೆ ತಳ್ಳಿದ ಸಿದ್ದು:ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಲಿಂಬಾವಳಿ, ಬಿಜೆಪಿ ಅಧಿಕಾರದ ಅವಧಿಯಲ್ಲಿ ನಾವು ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಿದ್ದೆವು. ಅದನ್ನು ಸಿದ್ದರಾಮಯ್ಯ ಸರ್ಕಾರ ಕಡಿಮೆ ಮಾಡಿದೆ. ಈ ಸಮಾಜವನ್ನು ತ್ರಿಶಂಕು ಸ್ಥಿತಿಗೆ ತಳ್ಳಿದ್ದಾರೆ ಎಂದು ಟೀಕಿಸಿದರು.
ಎಸ್ಸಿ, ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಉಚಿತ ಯೋಜನೆಗಳಿಗೆ ಹಣ ಬಳಸಿಕೊಳ್ಳಲು ಆರಂಭಿಸಿದ್ದಾರೆ ಎಂದು ದೂರಿದರು. ಒಳ ಮೀಸಲಾತಿಯಲ್ಲೂ ಗೊಂದಲ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು. ಕಾಂಗ್ರೆಸ್ಸಿನ ಜನವಿರೋಧಿ, ದಲಿತ ವಿರೋಧಿ ನೀತಿಗೆ ಜನತೆ ಎರಡೂ ಕಡೆಗಳಲ್ಲಿ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಯುವಜನರ ಹಿತದೃಷ್ಟಿಯಿಂದ ತಕ್ಷಣವೇ ಖಾಲಿ ಹುದ್ದೆ ಭರ್ತಿ ಮಾಡಲು ಆಗ್ರಹಿಸಿದರು.