ಸಾರಾಂಶ
ಕನ್ನಡಪ್ರಭವಾರ್ತೆ ಪುತ್ತೂರು
ಗ್ರಾಮೀಣ ಪ್ರತಿಭೆಗಳನ್ನು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಾಹಿತ್ಯ ಸಂಭ್ರಮಗಳನ್ನು ಅಳವಡಿಸುವುದು ಉತ್ತಮ ಬೆಳವಣಿಗೆಯಾಗಿದೆ. ಗ್ರಾಮೀಣ ಪ್ರತಿಭೆಗಳು ಸಾಹಿತ್ಯ ಕ್ಷೇತ್ರದಲ್ಲಿ ಬೆಳೆಯಲು ಗ್ರಾಮ ಸಾಹಿತ್ಯ ಚಿಂತನೆ ಪರಿಣಾಮಕಾರಿಯಾಗಿದೆ. ಇದರಿಂದಾಗಿ ಗ್ರಾಮೀಣ ಮಟ್ಟದ ಸಾಹಿತಿಗಳನ್ನು ಮತ್ತು ಸಾಹಿತ್ಯ ಆಸಕ್ತ ವಿದ್ಯಾರ್ಥಿಗಳನ್ನು ಗುರುತಿಸಲು ಸಹಕಾರಿಯಾಗಲಿದೆ ಎಂದು ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಪ್ಪ ಪೂಜಾರಿ ತಿಳಿಸಿದರು. ಅವರು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಗ್ರಾ.ಪಂ. ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಅವರ ಪೋಷಕತ್ವದಲ್ಲಿ ಶನಿವಾರ ಕೊಡಿಪ್ಪಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಸರ್ವಾಧ್ಯಕ್ಷತೆ ವಹಿಸಿದ್ದ ಕೊಡಿಪ್ಪಾಡಿ ಸರ್ಕಾರಿ ಉನ್ನತೀಕರಿಸಿದ ಹಿ ಪ್ರಾ ಶಾಲೆ ವಿದ್ಯಾರ್ಥಿನಿ ಶಮಿತ ಮಾತನಾಡಿ, ಗ್ರಾಮ ಸಾಹಿತ್ಯ ಸಂಭ್ರಮವು ಶಾಲಾ ಮಕ್ಕಳಿಗೆ ಸಾಹಿತ್ಯದ ಬಗ್ಗೆ ಒಲವು ಮೂಡಿಸುವ ಕಾರ್ಯಕ್ರಮವಾಗಿದ್ದು ನಮ್ಮಲ್ಲಿರುವ ಪ್ರತಿಭೆಗೆ ಗ್ರಾಮ ಮಟ್ಟದಲ್ಲಿ ಗುರುತಿಸಿ ಪ್ರೋತ್ಸಾಹಿಸುವ ಉತ್ತಮ ಕಾರ್ಯವಾಗಿದೆ ಎಂದರು. ಸಮಾರಂಭದಲ್ಲಿ ಗ್ರಾಮ ಮಟ್ಟದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಬಿ. ರಾಧಾಕೃಷ್ಣ ಭಟ್ ಬಟ್ರಪ್ಪಾಡಿ, ಮನ್ಮಥ ಶೆಟ್ಟಿ, ರವೀಂದ್ರ ಆಚಾರ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪರಿಷತ್‌ನ ಗೌರವ ಕಾರ್ಯದರ್ಶಿ ಹಾಗೂ ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಅಭಿನಂದನಾ ಕಾರ್ಯ ನೆರವೇರಿಸಿದರು. ಅಭಿನಂದನೆ ಸ್ವೀಕರಿಸಿದವರ ಪರವಾಗಿ ಮನ್ಮಥ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಚಿಗುರೆಲೆ ಸಾಹಿತ್ಯ ಬಳಗದ ಸದಸ್ಯ ಪತ್ರಕರ್ತ ಇಬ್ರಾಹಿಂ ಖಲೀಲ್ ಅವರು ಪತ್ರಿಕಾ ವರದಿಗಾರಿಕೆಯಲ್ಲಿ ಮಾಡಿರುವ ಸಾಧನೆಗಾಗಿ ಗೌರವಿಸಲಾಯಿತು. ಶಿವಮಣಿ ಕಲಾ ತಂಡದ ಮನುಕುಮಾರ್ ಶಿವನಗರ ಅವರ ಡಿಜಿಟಲ್ ವಾರ ಪತ್ರಿಕೆ `ಶಿವಮಣಿ ಕಲಾರಂಗ'''''''''''''''' ವನ್ನು ಕೊಡಿಪ್ಪಾಡಿ ಗ್ರಾಪಂ ಪಿಡಿಒ ಶರೀಫ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕಸಾಪ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿದರು. ಸಮಾರಂಭದಲ್ಲಿ ಪುತ್ತೂರಿನ ಉಪತಹಸಿಲ್ದಾರ್ ಸುಲೋಚನಾ ಅವರು ಸಾಹಿತ್ಯ ಪರಿಷತ್ತಿಗೆ 500 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ವೇದಿಕೆಯಲ್ಲಿ ಹಿರಿಯ ಸಾಹಿತಿಗಳು ಮಧು ಪ್ರಪಂಚ ಪತ್ರಿಕೆ ಸಂಪಾದಕರಾದ ನಾರಾಯಣ ರೈ ಕುಕ್ಕುವಳ್ಳಿ ಉಪಸ್ಥಿತರಿದ್ದರು. ಚಿಗುರೆಲೆ ಸಾಹಿತ್ಯ ಬಳಗದ ಪ್ರತೀಕ್ಷಾ ಆರ್ ಕಾವು ಸ್ವಾಗತಿಸಿದರು. ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿಂಧ್ಯಾ ಎಸ್ ರೈ ಕಾರ್ಯಕ್ರಮ ನಿರೂಪಿಸಿದರು. ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.