ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಹಾತ್ಮ ಗಾಂಧೀಜಿ ‘ನನ್ನ ಜೀವನವೇ, ನನ್ನ ಸಂದೇಶ’ ವೆಂದು ಸಾರಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಪಾದಿಸಿದ್ದಾರೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 155ನೇ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನುಡಿದಂತೆ ನಡೆಯುವ ಶಿಸ್ತನ್ನು ಮಹಾತ್ಮ ಗಾಂಧೀಜಿಯಂತೆ ಎಲ್ಲರೂ ಜೀವನದಲ್ಲಿ ಪಾಲಿಸಬೇಕು. ಹಾಗಾಗಿ ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಸಹ ಮಹಾತ್ಮ ಗಾಂಧೀಜಿ ಪುತ್ಥಳಿ ಕಾಣಬಹುದಾಗಿದೆ ಎಂದು ವೆಂಕಟ್ ರಾಜಾ ಹೇಳಿದರು.ವಿಶ್ವ ನಾಯಕರು ಮಹಾತ್ಮ ಗಾಂಧೀಜಿ ಜೀವನ ಬೋಧನೆ ಪಾಲಿಸುತ್ತಾರೆ ಎಂದರು.
ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಅವರು ಇಡೀ ವಿಶ್ವಕ್ಕೆ ಶಾಂತಿ ಬೋಧಿಸಿದರು ಎಂದರು.ಮಹಾತ್ಮ ಗಾಂಧೀಜಿ ಅವರು ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರ್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ರಾಷ್ಟ್ರಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು ಎಂದು ವಿವರಿಸಿದರು.
ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ಗಾಂಧೀಜಿ ವಿಚಾರಧಾರೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಪುಸ್ತಕ ಹಾಗೂ ಪತ್ರಿಕೆ ಅಧ್ಯಯನ ಮಾಡುವಂತಾಗಬೇಕು ಎಂದರು.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯದ ಪ್ರತೀಕ. ಗ್ರಾಮ ಸ್ವರಾಜ್ಯದ ಸಾಕಾರ ಮೂರ್ತಿ ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಣಿ ಮಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಬಸಪ್ಪ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸಿದ್ದೇಗೌಡ, ತಹಸೀಲ್ದಾರ್ ಪ್ರವೀಣ್ ಕುಮಾರ್, ಪೌರಾಯುಕ್ತ ರಮೇಶ್, ಬಿಸಿಎಂ ಇಲಾಖೆ ಅಧಿಕಾರಿ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸ್ಕೌಟ್ಸ್ ಮತ್ತು ಗೈಡ್ಸ್‌ನ ದಮಯಂತಿ, ಅಂಬೆಕಲ್ಲು ನವೀನ್, ಸಂಪತ್ ಕುಮಾರ್, ಟಿ.ಎಂ.ಮುದ್ದಯ್ಯ, ಹರಿಣಿ ಮತ್ತಿತರರಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ವಿಜೇತರಾದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿಜೇತರಾದ ತಲಾ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ಕನ್ನಡ ಸಾಹಿತ್ಯ ಪರಿಷತ್ತು ತಂಡದವರು ನಾಡಗೀತೆ ಹಾಡಿದರು. ಕಲಾವಿದ ಈ.ರಾಜು ಮತ್ತು ತಂಡದವರು ಆಶಯ ಗೀತೆ ಹಾಡಿದರು. ವಿನೋದ್ ಮೂಡಗದ್ದೆ ನಿರೂಪಿಸಿ, ವಂದಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಧ್ವಜಾರೋಹಣ ನೆರವೇರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿಭವನ ವರೆಗೆ ಸ್ವಚ್ಛತಾ ಜಾಥಾ ನಡೆಯಿತು. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿರುವ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಗಣ್ಯರು ಚಾಲನೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ, ನಗರಸಭೆ, ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್, ಜಾನಪದ ಪರಿಷತ್ತು ಹಾಗೂ ಭಾರತೀಯ ಸೇವಾದಳ ಇವರ ಸಹಕಾರದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.