ಕನ್ನಡಪ್ರಭ ವಾರ್ತೆ ಅಥಣಿರೈತರ ಸಾಲ ಮನ್ನಾ ಸೇರಿದಂತೆ ಬರಗಾಲ ಪರಿಹಾರದ ವಿಚಾರವೂ ಸರ್ಕಾರದ ಮುಂದಿದೆ. ಪರಿಸ್ಥಿತಿಯ ಸಮಗ್ರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಥಣಿ

ರೈತರ ಸಾಲ ಮನ್ನಾ ಸೇರಿದಂತೆ ಬರಗಾಲ ಪರಿಹಾರದ ವಿಚಾರವೂ ಸರ್ಕಾರದ ಮುಂದಿದೆ. ಪರಿಸ್ಥಿತಿಯ ಸಮಗ್ರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಬರಗಾಲ ಮತ್ತು ರೈತರ ಸಾಲ ಮನ್ನಾ ವಿಚಾರವಾಗಿ ಮಾತನಾಡಿದರು. ಮುಂಗಾರು ಅವಧಿ ಮುಗಿದಿದೆ. ಹಿಂಗಾರು ಮಳೆ ಆಶಾದಾಯಕವಾಗಿದೆ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬರಗಾಲ ಪರಿಸ್ಥಿತಿಯ ಕುರಿತು ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.ಒಂದು ಇಲಾಖೆಯಿಂದ ಮಾತ್ರ ಬರಗಾಲದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಸಂಬಂಧಪಟ್ಟ ಇಲಾಖೆಗಳ ಸಂಪೂರ್ಣ ವರದಿಗಳು ಬಂದ ನಂತರವೇ ಸಚಿವ ಸಂಪುಟದಲ್ಲಿ ಚರ್ಚೆ ನಡೆಯಲಿದೆ. ಬಳಿಕ ಮುಖ್ಯಮಂತ್ರಿಯವರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ ಹಾಗೂ ಮತ್ತೊಂದೆಡೆ ಅನಾವೃಷ್ಟಿ ಉಂಟಾಗಿದೆ. ಹಲವು ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ ಅನೇಕ ಪ್ರದೇಶಗಳಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಹಾನಿಗೊಳಗಾಗುತ್ತಿವೆ. ಇಂತಹ ಸಂದರ್ಭದಲ್ಲಿ ರೈತರ ಸಮಸ್ಯೆಗಳ ಕುರಿತು ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆಯಬೇಕಿದೆ. ಆದರೆ ಪ್ರತಿಪಕ್ಷದ ನಾಯಕರು ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ಅವರ ಮೇಲಿರುವ ಆರೋಪದ ಬಗ್ಗೆ ಸಾಕ್ಷಿಗಳನ್ನು ಒದಗಿಸುತ್ತಿಲ್ಲ. ವಿನಾಕಾರಣ ಸದನದಲ್ಲಿ ಗದ್ದಲವೆಬ್ಬಿಸಿ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಬುಧವಾರದವರೆಗೆ ಅಧಿವೇಶನ ನಡೆಯಲಿದ್ದು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆಗಳನ್ನು ಮಾಡಬೇಕು ಎಂದರು.

ಪಟ್ಟಣದಲ್ಲಿನ ಜನದಟ್ಟಣೆ ಹಾಗೂ ಟ್ರಾಫಿಕ್ ನಿಯಂತ್ರಣಕ್ಕಾಗಿ ಅಥಣಿ ಗ್ರಾಮೀಣ ಪೊಲೀಸ್ ಸ್ಥಾಪನೆ ಅಗತ್ಯವಾಗಿದೆ. ಪ್ರತ್ಯೇಕ ಠಾಣೆ ಸ್ಥಾಪನೆಗಾಗಿ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ. ಹೀಗಾಗಿ ಶೀಘ್ರದಲ್ಲಿಯೇ ಹಣಕಾಸು ಇಲಾಖೆ ಅನುಮೋದನೆ ಪಡೆದುಕೊಂಡು ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಹೇಳಿದರು.

ಪಟ್ಟಣದ ಪೊಲೀಸ್‌ ಠಾಣೆಯ ವ್ಯಾಪ್ತಿ ವಿಶಾಲವಾಗಿದೆ. ಅಲ್ಲದೆ ಸಿಬ್ಬಂದಿ ಕೊರತೆಯಿಂದ ಅಥಣಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಜತೆಗೆ ಪಟ್ಟಣದಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವುದು ಕಷ್ಟವಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಪೊಲೀಸ್ ಠಾಣೆಯನ್ನು ಪ್ರತ್ಯೇಕವಾಗಿ ಸ್ಥಾಪಿಸಲು ಪ್ರಸ್ತಾವ ಕಳುಹಿಸಲಾಗಿದೆ. ಹಣಕಾಸು ಇಲಾಖೆಯ ಒಪ್ಪಿಗೆ ದೊರೆತ ನಂತರ ಠಾಣೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.