ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಜ.29ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಎದುರು ಬೃಹತ್ ಪ್ರತಿಭಟನೆ ನಡೆಸಲು ಪಟ್ಟಣದಲ್ಲಿ ಗುರುವಾರ ನಡೆದ ರೈತ ಸಂಘದ ಕಾರ್ಯಕರ್ತರ ಸಭೆಯಲ್ಲಿ ತೀರ್ಮಾನಿಸಲಾಯಿತು.ತಾಲೂಕು ರೈತ ಸಂಘದ ಅಧ್ಯಕ್ಷ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು.
ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರು. ಆರ್ಥಿಕ ನೆರವು ನೀಡಿತು. ಈ ವರ್ಷ ಕೇವಲ 2,340 ಕೋಟಿ ರು. ಮಾತ್ರ ನೀಡಿದೆ. ಇದರಿಂದ 5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ನೀಡುತ್ತಿದ್ದ ಅಲ್ಪಾವಧಿ ಸಾಲಕ್ಕೆ ಕುತ್ತು ಬಂದಿದೆ ಎಂದು ರೈತ ಮುಖಂಡರು ಆರೋಪಿಸಿದರು.ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿಯಿಂದ ರಿಯಾಯ್ತಿ ದರದಲ್ಲಿ 15 ಲಕ್ಷದವರೆಗೆ ದೊರೆಯುತ್ತಿದ್ದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲಕ್ಕೂ ಹೊಡೆತ ಬೀಳುತ್ತದೆ. ಶೂನ್ಯ ಬಡ್ಡಿ ದರದಲ್ಲಿ ಸುಮಾರು 30 ಲಕ್ಷ ರೈತರು ಪಡೆಯುತ್ತಿದ್ದ ಸಾಲ ನಿಂತು ಹೋಗುವ ಆತಂಕ ಎದುರಾಗಿದೆ ಎಂದು ಮುಖಂಡರು ಕಳವಳ ವ್ಯಕ್ತಪಡಿಸಿದರು.
ನಬಾರ್ಡ್‌ನ ಈ ರೈತ ವಿರೋಧಿ ನೀತಿಯಿಂದ ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕ್‌ಗಳ ಮೊರೆ ಹೋಗಬೇಕು. ಇಲ್ಲವೇ ಖಾಸಗಿ ಸಾಲದ ಸುಳಿಗೆ ಬಲಿಯಾಗಿ ಸ್ಥಿರಾಸ್ತಿಗಳನ್ನು ಹರಾಜು ಮಾಡಿಕೊಂಡು ರೈತರು ಆತ್ಮಹತ್ಯೆಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತವಾಯಿತು.ಮೈಕ್ರೋ ಫೈನಾನ್ಸ್ ಗಳ ಹಾವಳಿ:
ರಾಜ್ಯದಲ್ಲಿ ತಲೆಯೆತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿ ಮತ್ತು ಕಿರುಕುಳದಿಂದಾಗಿ ಗ್ರಾಮೀಣ ಪ್ರದೇಶದ ಮಹಿಳೆಯರು ಮತ್ತು ದುಡಿಯುವ ವರ್ಗ ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಇದೆ. ಮಹಿಳೆಯರು ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಗೆ ಒಳಗುತ್ತಿದ್ದಾರೆ. ಅಲ್ಲದೆ ಕಿರುಕುಳದಿಂದ ಊರನ್ನೇ ತೊರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಕಾರ್ಯಕರ್ತರು ಅಳಲು ವ್ಯಕ್ತಪಡಿಸಿದರು.ಇದಕ್ಕೆ ಕಡಿವಾಣ ಹಾಕಬೇಕು ಸೇರಿದಂತೆ ಎಲ್ಲಾ ಬೇಡಿಕೆಗಳ ಕುರಿತಂತೆ ಜ.29ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಕಚೇರಿಗೆ ಮುತ್ತಿಗೆ ಹಾಕಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸುತ್ತಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲೆಗಳ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜನಪ್ರತಿನಿಧಿಗಳು ಹಾಗೂ ಶೇರುದಾರರು ಭಾಗವಹಿಸುವಂತೆ ಮುಖಂಡರು ಮನವಿ ಮಾಡಿದರು.
ಸಭೆಯಲ್ಲಿ ರೈತ ಮುಖಂಡರಾದ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಶೆಟ್ಟಿಹಳ್ಳಿ ರವಿಕುಮಾರ, ಉಮೇಶ್, ವರದರಾಜು, ಸಿದ್ದೇಗೌಡ, ಬೋರೇಗೌಡ, ದಯಾನಂದ, ರಾಮೇಗೌಡ, ಸಾವಿತ್ರಮ್ಮ, ರಮ್ಯಾ, ಸಿದ್ದರಾಜು, ದೇಶಿಗೌಡ ಮತ್ತಿತರರು ಪಾಲ್ಗೊಂಡಿದ್ದರು.