ಸಾರಾಂಶ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸ್ಥಳೀಯ ನಾಯಕರು ಈಗಿನಿಂದಲೇ ತಾಲೀಮು ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಹೇಳಿದರು.
ಮದ್ದೂರು : ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಸ್ಥಳೀಯ ನಾಯಕರು ಈಗಿನಿಂದಲೇ ತಾಲೀಮು ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಹೇಳಿದರು.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಎಸ್.ಪಿ.ಸ್ವಾಮಿ ಅವರಿಂದ ಅಭಿನಂದನೆ ಸ್ವೀಕರಿಸಿ ಜಿಲ್ಲಾ ನಾಯಕರೊಂದಿಗೆ ಕೆಲಕಾಲ ಚರ್ಚೆ ನಡೆಸಿದರು.
ಕೆಲವೇ ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ಎದುರಾಗಲಿವೆ. ನಾಯಕರಗಳು ಪ್ರತಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಮಟ್ಟದಲ್ಲಿ ಸಭೆ ನಡೆಸುವ ಮೂಲಕ ಕಾರ್ಯಕರ್ತರನ್ನು ಚುನಾವಣೆಗೆ ಅಣಿಗೊಳಿಸಬೇಕು ಎಂದರು.
ಆಡಳಿತರೂಢ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳಾದ ಹಾಲು ಮತ್ತು ವಿದ್ಯುತ್ ದರ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಬೆಲೆ ಏರಿಕೆಯಿಂದಾಗಿ ರಾಜ್ಯದ ಜನ ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ ವಿಚಾರ ಮುಂದಿನ ಚುನಾವಣೆಗಳಲ್ಲಿ ಸರ್ಕಾರದ ವಿರುದ್ಧ ಹೋರಾಟದ ಪ್ರಬಲ ಅಸ್ತ್ರವಾಗಬೇಕು ಎಂದರು.
ಯುಗಾದಿ ನಂತರ ಬಿಜೆಪಿ ಪ್ರತಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲಿದೆ. ನಮ್ಮ ಈ ಹೋರಾಟ ಚುನಾವಣೆಗಳಲ್ಲಿ ನಮ್ಮ ಬಿಜೆಪಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಸಹಕಾರವಾಗುವ ರೀತಿಯಲ್ಲಿ ನಾಯಕರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಮ್, ಇಂಡವಾಳು ಸಚ್ಚಿದಾನಂದ ಸೇರಿದಂತೆ ಹಲವು ಮುಖಂಡರು ಇದ್ದರು.
ಡಾ.ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಪತ್ರಾಭಿಯಾನ
ಮಂಡ್ಯ: ಡಾ.ಬಾಬು ಜಗಜೀವನರಾಂ ರವರ 118ನೇ ಜಯಂತಿ ಅಂಗವಾಗಿ ಏ.5ರಂದು ಶಾಲಾ ವಿದ್ಯಾರ್ಥಿಗಳಿಗೆ ಡಾ. ಬಾಬು ಜಗಜೀವನರಾಂ ರವರ ಆದರ್ಶಗಳನ್ನು ಕುರಿತು ಪತ್ರದ ಮೂಲಕ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಲು ಪತ್ರಾಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ತಹಸೀಲ್ದಾರ್ ಅಧ್ಯಕ್ಷರು, ಕಾರ್ಯನಿರ್ವಹಕ ಅಧಿಕಾರಿ ತಾಲೂಕು ಪಂಚಾಯತ್‌ನ ಉಪಾಧ್ಯಕ್ಷರು, ಆಯಾ ತಾಲೂಕಿನ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ, ಟಿ.ಸಿ.ಒ, ಸದಸ್ಯರುಗಳು, ಹಾಗೂ ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು, ಸದಸ್ಯ ಕಾರ್ಯದರ್ಶಿ ಇವರನ್ನು ಒಳಗೊಂಡಂತೆ ತಾಲ್ಲೂಕು ಮಟ್ಟದ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.