ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಅದಾಲಯತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಶಿವಾಜಿ ನಲವಡೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರು ಭಾಗವಹಿಸಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಅದಾಲಯತ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾ.ಶಿವಾಜಿ ನಲವಡೆ ತಿಳಿಸಿದರು.ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾ ಕೇಂದ್ರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ಮಾ.೮ ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ಒಳಪಡಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು (ಡಿಆರ್‌ಟಿ), ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ), ಕಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ನ್ಯಾಯಾಲಯದಲ್ಲಿನ ಬಾಕಿ ಇರುವ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.ಜಿಲ್ಲೆಯಲ್ಲಿ ಮಾರ್ಚ್ ೮ಕ್ಕೆ ಜರುಗುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನಕ್ಕೆ ನಾಂದಿ ಹಾಡಲು ಸುವರ್ಣಾವಕಾಶ ಕಲ್ಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಎಸ್.ಎಸ್.ಚೂರಿ ಉಪಸ್ಥಿತರಿದ್ದರು.ಜಿಲ್ಲೆಯಲ್ಲಿ ಬಾಕಿಯಿರುವ ಪ್ರಕರಣಗಳೆಷ್ಟು..?:
ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಫೆ.೧ಕ್ಕೆ ೪೪,೭೮೩ ಸಿವಿಲ್ ಪ್ರಕರಣಗಳು, ೨೩,೬೭೮ ಕ್ರಿಮಿನಲ್ ಪ್ರಕರಣಗಳು ಒಳಗೊಂಡಂತೆ ಒಟ್ಟು ೬೮,೪೬೧ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಇವುಗಳಲ್ಲಿ ಈಗಾಗಲೇ ೪,೩೩೦ ಸಿವಿಲ್ ಪ್ರಕರಣಗಳು ಹಾಗೂ ೩,೫೭೯ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು ೭,೯೦೯ ಪ್ರಕರಣಗಳನ್ನು ಇತ್ಯರ್ಥಕ್ಕಾಗಿ ಗುರುತಿಸಲಾಗಿದೆ. ಸಂಬಂಧಿಸಿದ ವಕೀಲರು ಹಾಗೂ ಕಕ್ಷಿದಾರರೊಂದಿಗೆ ಮಾತುಕತೆಯ ಮೂಲಕ ಇನ್ನೂ ಹೆಚ್ಚಿನ ಪ್ರಕರಣಗಳನ್ನು ಸಹ ರಾಜಿಗಾಗಿ ಗುರುತಿಸಲಾಗುತ್ತಿದೆ. ಇನ್ನೂ ಹೆಚ್ಚು ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.