ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಮಾ. 14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಮಾ. 14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ 35,263 ಪ್ರಕರಣಗಳ ಪೈಕಿ 4,397 ಪ್ರಕರಣಗಳನ್ನು ಈ ದಿನ ಇತ್ಯರ್ಥಕ್ಕೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು.ಅವರು ಬುಧವಾರ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಲೋಕ ಅದಾಲತ್ ಬಗ್ಗೆ ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ನಾನಾ ಕಾರಣಗಳಿಂದ ಇತ್ಯರ್ಥವಾಗದೆ ಬಾಕಿ ಉಳಿದ ಪ್ರಕರಣಗಳನ್ನು ಉಭಯ ಪಕ್ಷಗಾರರ ನಡುವೆ ರಾಜಿ ಪ್ರಕ್ರಿಯೆಯ ಮೂಲಕ ವಿಲೇವಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ. ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ಸಾಲದ ವಸೂಲಾತಿ, ಮೋಟಾರ್ ವಾಹನ ಅಪಘಾತ ಪ್ರಕರಣಗಳಿಗೆ ಸಂಬಂಧಿತ ಪ್ರಕರಣಗಳಿಗೆ ಸಂಬಂಧಿಸಿ ಈಗಾಗಲೇ ಬ್ಯಾಂಕ್, ವಿಮೆ, ಇನ್ಸೂರೆನ್ಸ್ ಕಂಪನಿಗಳ ಮೂಲಕ ಮಾತುಕತೆ ನಡೆಸಿದ್ದೇವೆ. ಆದರೆ ಉಡುಪಿ ಮತ್ತು ಕಾರ್ಕಳದಲ್ಲಿ ಈ ಬಗ್ಗೆ ಸಂಬಂಧಪಟ್ಟ ಕಂಪನಿಗಳಿಂದ ಸೂಕ್ತ ಪ್ರತ್ಯುತ್ತರ ಬಂದಿಲ್ಲ. ಹೀಗಾಗಿ ವಕೀಲರ ಸಂಘದ ಗಮನಕ್ಕೆ ತರಲಾಗಿದೆ ಎಂದರು.ಕಳೆದ ಡಿಸೆಂಬರ್‌ನಲ್ಲಿ 4341 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, ಅದರಲ್ಲಿ 3729 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಅಲ್ಲದೇ ಪರಿಹಾರ ಮೊತ್ತ 17.31 ಕೋಟಿ ಪರಿಹಾರವನ್ನೂ ವಿತರಿಸಲಾಗಿದೆ ಎಂದವರು ಹೇಳಿದರು.ಪ್ರಕರಣದ ಇತ್ಯರ್ಥಕ್ಕೆ ಉಭಯ ಕಕ್ಷಿದಾರರ ಉಪಸ್ಥಿತಿ ಕಡ್ಡಾಯವಾಗಿದೆ. ಈ ಸಂದರ್ಭದಲ್ಲಿ ಅವರಿಗೆ ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಮಾರ್ಗದರ್ಶವನ್ನೂ ನೀಡಲಾಗುತ್ತದೆ, ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನಗೊಳ್ಳುವುದಿಂದ ಸಮಾಜದಲ್ಲಿ ಸೌಹಾರ್ದತೆ ಉಳಿಯಲು ಸಾಧ್ಯವಾಗುತ್ತದೆ ಎಂದವರು ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಉಪಸ್ಥಿತರಿದ್ದರು.