ಸೆಪ್ಟೆಂಬರ್ ೧೪ರಂದು ರಾಷ್ಟ್ರೀಯ ಲೋಕ ಅದಾಲತ್

| Published : Aug 12 2024, 01:01 AM IST

ಸಾರಾಂಶ

ಬಾಕಿ ಉಳಿದಿರುವ ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು, ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ನೋಂದಣಿ ಪ್ರಕರಣ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರ ಲಘು ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ನೀರಿನ ಕರವಸೂಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸೆಪ್ಟೆಂಬರ್ ೧೪ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಅವಕಾಶವಿದೆ.

ಕನ್ನಡಪ್ರಭ ವಾರ್ತೆ ಹಾಸನ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಸೆಪ್ಟೆಂಬರ್ ೧೪ ರಂದು ೨ನೇ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ.

ಕಳೆದ ಜುಲೈ ೧೩ ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ೩,೧೮,೩೧೬ ಪ್ರಕರಣಗಳನ್ನು ಇತ್ಯರ್ಥಪಡಿಸಿ ಹಾಸನ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದ್ದಾರೆ.ಸದರಿ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳು, ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಜನನ ನೋಂದಣಿ ಪ್ರಕರಣ, ಜೀವನಾಂಶ ಪ್ರಕರಣಗಳು ಹಾಗೂ ಇನ್ನಿತರ ಲಘು ಕ್ರಿಮಿನಲ್ ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ನೀರಿನ ಕರವಸೂಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿ ದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತವೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣ ಅವಕಾಶವಾಗಿದೆ. ಇದರಿಂದ ಸಮಯದ ಉಳಿತಾಯವಾಗಲಿದ್ದು, ಶೀಘ್ರ ನ್ಯಾಯದಾನಕ್ಕೆ ಅವಕಾಶವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ದಾಕ್ಷಾಯಿಣಿ ಜಿ ಕೆ ರವರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ತಾಲೂಕುಗಳಲ್ಲಿ ನ್ಯಾಯಾಲಯ ಆವರಣದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.