ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಭರತ್ ಹೆಗಡೆ

| Published : Mar 28 2024, 12:49 AM IST

ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ: ಭರತ್ ಹೆಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಹಾವೇರಿ ತಾಲೂಕಿನ ಗಾಂಧಿಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಮತದಾನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಹಾವೇರಿ: ಲೋಕಸಭಾ ಚುನಾವಣೆಯು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾಗಿದೆ. ಪ್ರತಿಯೊಬ್ಬ ಮತದಾರರು ತಪ್ಪದೆ ಮತದಾನ ಮಾಡುವ ಮೂಲಕ ಚುನಾವಣಾ ಹಬ್ಬದಲ್ಲಿ ಭಾಗವಹಿಸಬೇಕು ಎಂದು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಹೇಳಿದರು.

ತಾಲೂಕು ಪಂಚಾಯಿತಿ, ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಗಾಂಧಿಪುರ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಕಾಲೇಜಿನ ವಿದ್ಯಾರ್ಥಿಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯವಾಗಿದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗಬಾರದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಡಿ.ಟಿ. ಪಾಟೀಲ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಮಿತಾ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸ್ವೀಪ್ ಚಟುವಟಿಕೆ ಅನುಷ್ಠಾನಕ್ಕೆ ಸಮಿತಿ ರಚನೆ:

ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಸ್ವೀಪ್ ಕಾರ್ಯಕ್ರಮದ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ರಚಿಸಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಅಕ್ಷಯ್ ಶ್ರೀಧರ್ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಮಟ್ಟದ ಸಮಿತಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧ್ಯಕ್ಷರಾಗಿದ್ದು, ಉಪ ಕಾರ್ಯದರ್ಶಿಗಳು ಸದಸ್ಯ ಕಾರ್ಯದರ್ಶಿಗಳು ಹಾಗೂ ನೋಡಲ್ ಅಧಿಕಾರಿಗಳಾಗಿದ್ದಾರೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ, ಜಿ.ಪಂ. ಯೋಜನಾ ನಿರ್ವಾಹಕ ಹಾಗೂ ಮೌಲ್ಯಮಾಪನ ಅಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ವಿಶೇಷಚೇತನ ಕಲ್ಯಾಣಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ, ಜಿಲ್ಲಾ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ, ಜಿಲ್ಲಾ ಯುವ ಜನ ಸೇವಾಧಿಕಾರಿ ಸದಸ್ಯರಾಗಿದ್ದಾರೆ.

ತಾಲೂಕು ಮಟ್ಟದ ಸಮಿತಿ: ತಾಲೂಕು ಮಟ್ಟದ ಸಮಿತಿಗೆ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಅಧ್ಯಕ್ಷರಾಗಿದ್ದು, ತಹಸೀಲ್ದಾರ್‌ ಉಪಾಧ್ಯಕ್ಷರಾಗಿದ್ದಾರೆ. ಪಂ.ರಾ.ಇಂ.ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಹಿಂದುಳಿದ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ, ಪಶು ಪಾಲನಾ ಮತ್ತು ಪಶುವೈದ್ಯ ಸೇವೆ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ನಗರಸಭೆ ಮುಖ್ಯಾಧಿಕಾರಿಗಳು ಸದಸ್ಯರಾಗಿದ್ದು, ತಾಪಂ ಸಹಾಯಕ ನಿರ್ದೇಶಕರು ನೋಡಲ್ ಅಧಿಕಾರಿಗಳಾಗಿದ್ದಾರೆ.ಗ್ರಾಪಂ ಮಟ್ಟದಲ್ಲಿ ಪಿಡಿಒ ಅಧ್ಯಕ್ಷರಾಗಿದ್ದು, ಪಂಚಾಯಿತಿ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರಗಳ ಎ.ಎನ್.ಎಂ.ಗಳು ಸದಸ್ಯರಾಗಿದ್ದಾರೆ.