ಲೋಕಸಭಾ ಚುನಾವಣೆ: ಹಿರಿಯ ನಾಗರಿಕರಿಂದ ನೋಟಾ ಮತದಾನಕ್ಕೆ ಚಿಂತನೆ

| Published : Mar 24 2024, 01:34 AM IST

ಲೋಕಸಭಾ ಚುನಾವಣೆ: ಹಿರಿಯ ನಾಗರಿಕರಿಂದ ನೋಟಾ ಮತದಾನಕ್ಕೆ ಚಿಂತನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿರಿಯ ನಾಗರಿಕರ ಸಮಸ್ಯೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹಿರಿಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಹಿರಿಯ ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿರಿಯ ನಾಗರಿಕರೆಲ್ಲರೂ ನೋಟಾಕ್ಕೆ ಮತ ಹಾಕಬೇಕು ಎಂಬ ಒಕ್ಕೊರಲ ಅಭಿಪ್ರಾಯ ಕೇಳಿಬಂದಿತು.

ಗುರುವಾರ ನಗರದ ಹಿರಿಯ ನಾಗರಿಕರ ಸಂಘದ ಹಿರಿಯರ ಹೆಜ್ಜೆ ವೇದಿಕೆಯಲ್ಲಿ ಉತ್ತರ ಕರ್ನಾಟಕ ಹಾಗೂ ಹುಬ್ಬಳ್ಳಿ-ಧಾರವಾಡ ಹಿರಿಯ ನಾಗರಿಕರ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಹಾಗೂ ಪ್ರೋಬಸ್ ಕ್ಲಬ್ ಪದಾಧಿಕಾರಿಗಳ ಸಭೆ ನಡೆಸಲಾಯಿತು.

ರಾಜ್ಯ ಹಾಗೂ ಕೇಂದ್ರ ಸರ್ಕಾರ ಹಿರಿಯ ನಾಗರಿಕರ ಸಮಸ್ಯೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಈ ಕುರಿತು ಸಂಘಟನೆಯ ವತಿಯಿಂದ ಹಲವು ಬಾರಿ ಹೋರಾಟ ಮಾಡಿದರೂ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿರುವುದು ನೋವಿನ ಸಂಗತಿ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದ ಹಿರಿಯ ನಾಗರಿಕರ ಈ ಸಭೆಯಲ್ಲಿ ಬರುವ ಸಲಹೆ, ಸೂಚನೆಗಳನ್ನು ಗಣನೆಗೆ ತೆಗೆದುಕೊಂಡು ಮುಂದೆ ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಬಿ.ಎ. ಪಾಟೀಲ ತಿಳಿಸಿದರು.

ಈ ವೇಳೆ ಉತ್ತರ ಕರ್ನಾಟಕ ನಿವೃತ್ತ ವಿಶ್ವವಿದ್ಯಾಲಯ ಮತ್ತು ಕಾಲೇಜು ಶಿಕ್ಷಕರ ಸಂಘದ ಗೌರವ ಕಾರ್ಯದರ್ಶಿ ಪ್ರೊ. ಜಿ.ಎಸ್. ಕಲಬುರ್ಗಿ ಮಾತನಾಡಿ, ಪಿಂಚಣಿದಾರರಿಗೆ ವಯಸ್ಸಿಗೆ ಅನುಗುಣವಾಗಿ ಹೆಚ್ಚುವರಿ ಮೊತ್ತ ನೀಡಬೇಕೆಂದು ನ್ಯಾಯಾಲಯ ಆದೇಶಿಸಿದರೂ ರಾಜ್ಯ ಸರ್ಕಾರ ಪಾಲನೆ ಮಾಡುತ್ತಿಲ್ಲ. ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಹಿರಿಯರಿಗೆ ಗೌರವ ನೀಡಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸುನಂದಾ ಬೆನ್ನೂರ, ಆರ್‌.ಕೆ. ಮಠದ, ಸತೀಶ ಹಳ್ಳೂರ, ಎ.ಸಿ. ಕೋಳೂರ, ಡಿ.ಟಿ. ಪಾಟೀಲ ಸೇರಿದಂತೆ ಹಲವರಿದ್ದರು.