ಭ್ರಷ್ಟಾಚಾರ ಕಿತ್ತೊಗೆಯಲು ಲೋಕಾಯುಕ್ತ ಬದ್ಧ: ಉಪ ಲೋಕಾಯುಕ್ತ ಬಿ.ವೀರಪ್ಪ

| Published : Oct 21 2024, 12:30 AM IST / Updated: Oct 21 2024, 12:31 AM IST

ಸಾರಾಂಶ

ಪ್ರಜಾಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲುಕನ್ನಡಪ್ರಭ ವಾರ್ತೆ ತುಮಕೂರು

ಪ್ರಜಾಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಹೇಳಿದರು.

ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ 3 ದಿನಗಳ ಕಾಲ ಲೋಕಾಯುಕ್ತ ಕುಂದು-ಕೊರತೆ ಸಭೆ, ಬಾಕಿ ದೂರು ಅರ್ಜಿಗಳ ವಿಲೇವಾರಿ, ಕಾನೂನು ಅರಿವು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ತಿಳಿಸಿದರು.

ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅ.18ರಂದು ನಡೆದ ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ 299 ಹೊಸ ದೂರುಗಳಿಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಬಾಕಿ ಇದ್ದ 183 ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅ. 19ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ 71 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ತಿಳಿಸಿದರು.

ಗುಬ್ಬಿಯಲ್ಲಿ ಮಳೆ ನೀರಿನಿಂದ ನಿರಾಶ್ರಿತರಾಗಿದ್ದ ಹಂದಿಜೋಗರ ಕಾಲೋನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ತಾಲೂಕು ಆಡಳಿತದಿಂದ ಗುರುತಿಸಿರುವ ಸಾತೇನಹಳ್ಳಿ ಪ್ರದೇಶಕ್ಕೆ ತೆರಳುವಂತೆ ನಿವಾಸಿಗಳ ಮನವೊಲಿಸಲಾಗಿದೆ.

ನಂತರ ನಿರಾಶ್ರಿತರಿಗಾಗಿ ತಾಲೂಕು ಆಡಳಿತದಿಂದ ನಿರ್ಮಿಸಿರುವ ತಾತ್ಕಾಲಿಕ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

ಸರ್ಕಾರಿ ಇಲಾಖಾಧಿಕಾರಿ-ಸಿಬ್ಬಂದಿಗಳು ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾರ್ವಜನಿಕರು ಕೂಡ ಬದಲಾಗಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಸೇರಿದಂತೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.