ಉಡುಪಿ: ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಸೀಲ್ದಾರ್ ಕಚೇರಿಗೆ ಭಾನುವಾರ ದಾಳಿ ನಡೆಸಿ ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲಿಸಿದರು.
ಬೆಂಗಳೂರು ಲೋಕಾಯುಕ್ತ ಕಚೇರಿಯಿಂದ ಶೋಧನಾ ವಾರಂಟ್ ಪಡೆದು ನಡೆಸಿದ ಈ ಕಾರ್ಯಾಚರಣೆ ಮಂಗಳೂರು ಲೋಕಾಯುಕ್ತ ಎಸ್‌ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ನಡೆಯಿತು.ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ಹಾಗೂ ರಾಜೇಂದ್ರ ನಾಯ್ಕ್, ಮಂಗಳೂರು ಲೋಕಾಯುಕ್ತ ಇನ್‌ಸ್ಪೆಕ್ಟರ್ ಭಾರತಿ ಸೇರಿದಂತೆ ಉಡುಪಿ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ತಹಸೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ವಿಲೇವಾರಿಗೆ ಬಾಕಿ ಉಳಿದಿದ್ದ ಕಡತಗಳು ಹಾಗೂ ನಿಯಮಬಾಹಿರವಾಗಿ ವಿಲೇವಾರಿ ಮಾಡಲಾಗಿದೆ ಎನ್ನಲಾದ ದಾಖಲೆಗಳನ್ನು ಪರಿಶೀಲಿಸಿ ಕೆಲ ಪ್ರಮುಖ ಕಡತಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.ಪರಿಶೀಲನೆ ವೇಳೆ ಪತ್ತೆಯಾದ ಅಂಶಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಗೌರವಾನ್ವಿತ ಲೋಕಾಯುಕ್ತರಿಗೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.