ಈ ಸಲ ನಿರೀಕ್ಷೆಗೂ ಮೀರಿದ ಫಲಿತಾಂಶ: ವಿಜಯೇಂದ್ರ

| Published : Mar 30 2024, 12:50 AM IST

ಸಾರಾಂಶ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ. ಇದು ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ

- ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆಯಲ್ಲಿ ಹೇಳಿಕೆಕನ್ನಡಪ್ರಭ ವಾರ್ತೆ ಬೆಂಗಳೂರು

‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ. ಇದು ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಜತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ ಬಂದಂತಾಗಿದೆ. ಮಂಡ್ಯ ಮತ್ತು ಮೈಸೂರಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಜಂಟಿ ಪ್ರವಾಸ ಮಾಡಲಾಗಿದೆ. ಹಲವು ಬಾರಿ ಹೊಂದಾಣಿಕೆ ರಾಜಕೀಯ ನಡೆದಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆಯನ್ನು ರಾಜ್ಯದ ಜನರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು.

ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ. 2006ರಲ್ಲಿಯೂ ಬಿಜೆಪಿ-ಜೆಡಿಎಸ್ ನಡುವೆ ಹೊಂದಾಣಿಕೆಯಾಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಜೆಡಿಎಸ್‌ ಎಚ್‌.ಡಿ.ದೇವೇಗೌಡ ಅವರ ಸಮ್ಮತಿ ಇರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಎಚ್‌.ಡಿ.ದೇವೇಗೌಡ ಅವರು ಈ ಬಾರಿ ಸಮ್ಮಿಲನಕ್ಕೆ ಆಶೀರ್ವಾದ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಈ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ಆಶೀರ್ವಾದ ಮಾಡಲಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ಹೇಳಿದರು.

ಮೈಸೂರು, ಮಂಡ್ಯದಲ್ಲಿ ಕಾರ್ಯಕರ್ತರ ಉತ್ಸಾಹ ಗಮನಿಸಿದ್ದೇವೆ. ತಳಮಟ್ಟದಲ್ಲೂ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಚುನಾವಣೆಯಲ್ಲಿ ಎರಡೂ ಪಕ್ಷಗಳ ಮುಖಂಡರ ಜವಾಬ್ದಾರಿ ಹೆಚ್ಚಾಗಿದೆ. ಈ ಸಮ್ಮಿಲನವನ್ನು ಜನರು ಗಂಭೀರವಾಗಿ ಪರಿಗಣಿಸಿದ್ದಾರೆ. ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ವಿಶ್ವಾಸದಿಂದ ದುಡಿದು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ತಿಳಿಸಿದರು.