ಸಾರಾಂಶ
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಬದಲಾವಣೆ ತರುವುದರ ಜೊತೆಗೆ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿಯೊಂದಿಗೆ ಸಾಗುತ್ತಿರುವ ಎಂ.ಎನ್. ಪಾಟೀಲರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜೆಮ್ ಶುಗರ್ಸ್ ನಿರ್ದೇಶಕ ರಾಮನಗೌಡ ಜಕ್ಕನಗೌಡರ ಬಣ್ಣಿಸಿದರು.
ಕನ್ನಡಪ್ರಭ ವಾರ್ತೆ ಬೀಳಗಿ
ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಶಿಕ್ಷಣಕ್ಕಾಗಿ ಕ್ರಾಂತಿಕಾರಿ ಬದಲಾವಣೆ ತರುವುದರ ಜೊತೆಗೆ ಸರ್ವರಿಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿಯೊಂದಿಗೆ ಸಾಗುತ್ತಿರುವ ಎಂ.ಎನ್. ಪಾಟೀಲರ ಕಾರ್ಯ ಶ್ಲಾಘನೀಯವಾಗಿದೆ ಎಂದು ಜೆಮ್ ಶುಗರ್ಸ್ ನಿರ್ದೇಶಕ ರಾಮನಗೌಡ ಜಕ್ಕನಗೌಡರ ಬಣ್ಣಿಸಿದರು.ಇಲ್ಲಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆವರಣದಲ್ಲಿ ಎಂ.ಎನ್. ಪಾಟೀಲ ಅವರ ೫೪ನೇ ವರ್ಷದ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಹಿಂದೆ ಉತ್ತರ ಕರ್ನಾಟಕ ಭಾಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಯಾವ ಶಿಕ್ಷಣ ಸಂಸ್ಥೆಗೆ ಸೇರಿಸಬೇಕು ಎಂಬ ಚಿಂತೆ ಕಾಡುತ್ತಿತ್ತು. ಬೀಳಗಿ ಪಟ್ಟಣದಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಿ ಎಲ್ ಕೆಜಿ ಯಿಂದ ಪದವಿವರಿಗೂ ಸಾವಿರಾರು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸ್ವಾಮಿ ವಿವೇಕಾನಂದ ಸಂಸ್ಥೆ ನೂರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ ಶಿಕ್ಷಣ ಕ್ರಾಂತಿ ಮಾಡಿದೆ. ಇದು ನಮ್ಮ ಜಿಲ್ಲೆ, ಉತ್ತರ ಕರ್ನಾಟಕ ಭಾಗದ ಮಕ್ಕಳ ಪಾಲಕರಲ್ಲಿ ಆಶಾಕಿರಣ ಮೂಡಿಸಿದೆ ಎಂದು ಅಭಿಪ್ರಾಯಪಟ್ಟರು.
ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಎನ್. ಪಾಟೀಲ ಅವರ ಜನ್ಮ ದಿನವನ್ನು ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿ ಶುಭ ಕೋರಿದರು. ಬೆಳಗ್ಗೆ ತಾಯಿ ನಿಂಗಮ್ಮನವರ ಆಶೀರ್ವಾದ ಪಡೆದ ಅವರು ಮಾಜಿ ಸಚಿವ ಸಹೋದರ ಎಸ್.ಆರ್. ಪಾಟೀಲ ಅವರ ಮನೆಯಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿದರು. ಎಸ್.ಆರ್. ಪಾಟೀಲ ಮೆಡಿಕಲ್ ಮತ್ತು ಸಂಶೋಧನಾ ಕೇಂದ್ರದ ಪ್ರಾಚಾರ್ಯರು, ಸಿಬ್ಬಂದಿ, ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕಿನ ವ್ಯವಸ್ಥಾಪಕ ಎಲ್.ಬಿ. ಕುರ್ತಕೋಟಿ ಹಾಗೂ ಸಿಬ್ಬಂದಿ, ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿ, ಜಿಲ್ಲೆಯ ವಿವಿಧ ಭಾಗಗಳಿಂದ ನೂರಾರು ಗಣ್ಯರು ಶುಭಾಶಯ ಕೋರಿದರು.