ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರುಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶ್ರೀ ಭಗೀರಥ ಗುರುಪೀಠದ ಶ್ರೀ ಡಾ ಪುರುಷೋತ್ತ ಮಾನಂದಪುರಿ ಮಹಾಸ್ವಾಮೀಜಿ, ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ, ಶ್ರೀ ಕನಕಗುರುಪೀಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರನ್ನು ಶಾಸಕ ಎಂ.ಆರ್.ಮಂಜುನಾಥ್ ಹಾಗೂ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಹಾಗೂ ಸಿಬ್ಬಂದಿ ವಾದ್ಯ ಮೇಳಗಳೊಂದಿಗೆ ಸಂಪ್ರದಾಯದಂತೆ ಆತ್ಮೀಯವಾಗಿ ಬರಮಾಡಿಕೊಂಡರು.ಬಳಿಕ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಷ್ಟೋತ್ತರ ಬಿಲ್ವಾರ್ಚನೆ, ಮಹಾಮಂಗಳಾರತಿ ಮಾಡಲಾಯಿತು. ದರ್ಶನ ಪಡೆದ ಜಗದ್ಗುರುಗಳಿಗೆ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.
ಕಾಮಗಾರಿ ಪರಿಶೀಲನೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಶಾಸಕ ಮಂಜುನಾಥ್ ಭೇಟಿ ನೀಡಿ ದರ್ಶನ ಪಡೆದ ನಂತರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವಿವಿಧತೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿ, ಮುಂದಿನ ವಾರ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರಗೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ಭಕ್ತಾದಿಗಳಿಗ ನೆರಳಿನ ವ್ಯವಸ್ಥೆ ಮಾಡಬೇಕು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಂಗಮಂದಿರದಲ್ಲಿ ಭಕ್ತಾದಿಗಳು ವಾಸ್ತವ್ಯ ಹೂಡುವ ಆವರಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಿ ಸ್ವಚ್ಛತೆ ಕಾಪಾಡಿಕೊಳ್ಳ ಬೇಕು ಎಂದು ತಿಳಿಸಿದರು.ತಾಳು ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ವತಿಯಿಂದ ಪ್ರಾರಂಭ ಮಾಡಿರುವ ಚೆಕ್ ಪೋಸ್ಟ್ ಗೆ ತೆರಳಿ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಈ ವೇಳೆ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ತಪ್ಪಿಸಲು ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅರಿವು ಮೂಡಿಸಬೇಕು ಎಂದು ತಿಳಿಸಿದರು. ಈ ವೇಳೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಎಇಇ ಚಿನ್ನಣ್ಣ, ಕಿರಿಯ ಅಭಿಯಂತರ ಸೆಲ್ವ ಗಣಪತಿ , ಪಿಡಿಒ ಕಿರಣ್ ಸೇರಿ ಮತ್ತಿತರರಿದ್ದರು.