ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಭೂಹಿಡುವಳಿ ಪ್ರಮಾಣಪತ್ರ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು.
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ವಿವಿಧ ಶಾಖೆಗಳನ್ನು ಪರಿಶೀಲಿಸಿ, ಕಚೇರಿ ಕಾರ್ಯನಿರ್ವಹಣೆ, ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸಿದರು.ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪ್ರತಿ ಅಹವಾಲನ್ನು ಗಂಭೀರವಾಗಿ ಪರಿಗಣಿಸಿ ನಿಗದಿತ ಅವಧಿಯೊಳಗೆ ಇತ್ಯರ್ಥಪಡಿಸುವಂತೆ ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದರು.
ಇ-ಆಫೀಸ್ ವ್ಯವಸ್ಥೆಯಲ್ಲಿ ಬಾಕಿಯಿರುವ ಎಲ್ಲಾ ಕಡತಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಡಿಜಿಟಲ್ ಕಾರ್ಯವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.ಸಾರ್ವಜನಿಕರ ಅನಗತ್ಯ ಅಲೆದಾಟ ತಪ್ಪಿಸುವ ಉದ್ದೇಶದಿಂದ, ಆದಾಯ ಮತ್ತು ಜಾತಿ ಪ್ರಮಾಣಪತ್ರ, ಭೂಹಿಡುವಳಿ ಪ್ರಮಾಣಪತ್ರ, ವಂಶವೃಕ್ಷ, ನಿವಾಸ ಪ್ರಮಾಣಪತ್ರ ಸೇರಿದಂತೆ ಎಲ್ಲಾ ಸೇವೆಗಳನ್ನು ಸಕಾಲ ಯೋಜನೆಯಡಿ ನಿಗದಿತ ಅವಧಿಯಲ್ಲಿಯೇ ಒದಗಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. ಅಲ್ಲದೇ, ವಿಳಂಬ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಚೇರಿಯ ಅಭಿಲೇಖಾಲಯ ಶಾಖೆ ಹಾಗೂ ದಾಖಲೆ ನಿರ್ವಹಣೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ದಾಖಲೆಗಳನ್ನು ಕೋರಿ ಸಲ್ಲಿಸುವ ಅರ್ಜಿಗಳ ಸಂದರ್ಭದಲ್ಲಿ ಸರ್ಕಾರಕ್ಕೆ ನಿಗದಿತ ಶುಲ್ಕವನ್ನು ಕಡ್ಡಾಯವಾಗಿ ಪಡೆದು ಸ್ವೀಕರಿಸಿದ ದಿನವೇ ಸರ್ಕಾರಕ್ಕೆ ಜಮಾ ಮಾಡಿ, ದಾಖಲೆಗಳನ್ನು ಸರಿಯಾಗಿ ಸಂರಕ್ಷಿಸುವಂತೆ ಸೂಚಿಸಿದರು. ಜೊತೆಗೆ ದಾಖಲೆಗಳ ಡಿಜಿಟಲೀಕರಣ ಹಾಗೂ ವ್ಯವಸ್ಥಿತ ಸಂಗ್ರಹಣೆಗೆ ಒತ್ತು ನೀಡುವಂತೆ ತಿಳಿಸಿದರು.ಹೋಬಳಿ ಮಟ್ಟದ ಎಲ್ಲಾ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿಯೇ ಕಡ್ಡಾಯವಾಗಿ ಲಭ್ಯವಿದ್ದು, ಸಾರ್ವಜನಿಕರ ಮನವಿಗಳಿಗೆ ತ್ವರಿತ ಸ್ಪಂದನೆ ನೀಡಬೇಕೆಂದು ನಿರ್ದೇಶನ ನೀಡಿದರು. ಕಚೇರಿಗೆ ನಿಗದಿತ ಸಮಯಕ್ಕೆ ಹಾಜರಾಗುವುದು, ಐಡಿ ಕಾರ್ಡ್ ಧರಿಸುವಿಕೆ, ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚಿಸಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಆಧಾರ್ ಸೀಡಿಂಗ್, ಇ-ಪೌತಿ ಖಾತಾ ಆಂದೋಲನ, ನಮೂನೆ ೧ ರಿಂದ ೫, ಗೈರು ವಿಲೆ ಕಡತಗಳ ವಿಲೇವಾರಿ, ಸಕಾಲ ಸೇವೆಗಳು, ನ್ಯಾಯಾಲಯ ಪ್ರಕರಣಗಳು, ಒತ್ತುವರಿ ತೆರವು, ಭೂ ಸುರಕ್ಷ, ೧೧-ಇ ತಿದ್ದುಪಡಿ, ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಹಾಗೂ ಹಕ್ಕುಪತ್ರ ವಿತರಣೆ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.