ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ

| Published : Jul 28 2024, 02:05 AM IST

ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಂದರ್ಭ ಕೆಲವು ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಮಡಿಕೇರಿಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಗ್ರಾಮಾಂತರ ಮಂಡಲದ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲಪಾಡಿ ವಹಿಸಿದ್ದ ಸಭಾ ವೇದಿಕೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಮುಖಂಡ ಕೆ.ಜಿ. ಬೋಪಯ್ಯ, ರಾಜ್ಯ ಕಾರ್ಯಕಾರಣಿ ಸದಸ್ಯ ಮನು ಮುತ್ತಪ್ಪ, ಪ್ರಮುಖರಾದ ರಾಬಿನ್ ದೇವಯ್ಯ ಕಾಂಗೀರ ಸತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಂಡಲ ಪ್ರಧಾನ ಕಾರ್ಯದರ್ಶಿ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತು ಡಿಮ್ ಬೋಪಣ್ಣ, ಜಿಲ್ಲಾ ವಕ್ತಾರ ತಳೂರ್ ಕಿಶೋರ್ ಕುಮಾರ್ ಉಪಸ್ಥಿತರಿದ್ದರು. ಕೆಲವು ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಮಂಡಿಸಲಾದ ವಿವಿಧ ನಿರ್ಣಯ

ಕೊಡಗು ಜಿಲ್ಲೆಯಲ್ಲಿ ವಿಪರೀತ ಗಾಳಿ ಮಳೆಯಿಂದಾಗಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು ದುರಸ್ತಿ ಕಾರ್ಯಗಳನ್ನು ವಿದ್ಯುತ್ ಇಲಾಖೆ ಸರಿಯಾಗಿ ಮಾಡದೆ ಇರುವುದರಿಂದ ರೈತರಿಗೆ ಮತ್ತು ಗ್ರಾಹಕರಿಗೆ ತೊಂದರೆಯಾಗುತ್ತಿದೆ. ಸಮರ್ಪಕವಾಗಿ ವಿದ್ಯುತ್ ಒದಗಿಸಲು ಒತ್ತಾಯಿಸಲಾಯಿತು.

ಗ್ರಾಮೀಣ ರಸ್ತೆಗಳು ತೀವ್ರ ಹದಗೆಟ್ಟಿದ್ದು ದುರಸ್ತಿ ಕಾಣದೆ ಸಾರ್ವಜನಿಕರಿಗೆ ಓಡಾಟಕ್ಕೆ ತುಂಬಾ ಕಷ್ಟಕರವಾಗಿರುವುದರಿಂದ ಆದಷ್ಟು ಶೀಘ್ರ ಕ್ರಮ ಕೈಗೊಳ್ಳಲು ಒತ್ತಾಯಿಸಲಾಯಿತು.

ಕೇಂದ್ರದ ಜಲಜೀವನ್ ಮಿಷನ್ ಯೋಜನೆ ಅಡಿ ಅನುದಾನ ಬಂದಿದ್ದರೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಗ್ರಾಮೀಣ ಜನರಿಗೆ ಶುದ್ಧ ನೀರು ಒದಗಿಸಲು ಸರ್ಕಾರ ವಿಫಲವಾಗಿದೆ. ಸಮಸ್ಯೆಯನ್ನು ಶೀಘ್ರವಾಗಿ ಸರಿಪಡಿಸುವಂತೆ ಒತ್ತಾಯಿಸಲಾಯಿತು.

ಜಿಲ್ಲೆಯಲ್ಲಿ ಆನೆ ಹಾವಳಿಯಿಂದ ರೈತರ ಬೆಳೆ ನಷ್ಟವಾಗಿದ್ದು ಅರಣ್ಯ ಇಲಾಖೆಯಿಂದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇಲಾಖೆ ತಕ್ಷಣ ಆನೆಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಲು ಒತ್ತಾಯಿಸಲಾಯಿತು.

ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಇಲಾಖೆ ಭೇಟಿ ನೀಡಿ ಸಮರ್ಪಕವಾದ ವರದಿಯನ್ನು ಸರ್ಕಾರಕ್ಕೆ ನೀಡದಿರುವುದರಿಂದ ಸಮಸ್ಯೆ ಉಂಟಾಗಿದೆ. ಕೆಡಿಪಿ ಸಭೆಯಲ್ಲಿ ಸ್ಪಂದನೆ ಸಿಗದೇ ಇರುವುದನ್ನು ಖಂಡಿಸಲಾಯಿತು.

ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಮಡಿಕೇರಿ ಗ್ರಾಮಾಂತರ ಮಂಡಲದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಸಹಕಾರಿ ಸಂಘಗಳ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು ಚುನಾಯಿತ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.