ಮಡಿಕೇರಿ: ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕಾರ

| Published : Jan 09 2025, 12:47 AM IST

ಸಾರಾಂಶ

ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಸೂಚಿಸಿದ್ದಾರೆ. ಮಡಿಕೇರಿ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಕೆ.ಸಿ.ಪ್ರಕಾಶ್ ಸೂಚಿಸಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬುಧವಾರ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತ ಕಾಯ್ದೆ ಮಾಹಿತಿ ಫಲಕ ಕಡ್ಡಾಯ ಅಳವಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು.

ಕಂದಾಯ, ಪಂಚಾಯತ್ ರಾಜ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಭೇಟಿ ನೀಡುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವುದು ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿ ಎಂದರು.

ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಆಹಾರ ವಿತರಿಸಬೇಕು. ಸುಭದ್ರತೆಯತ್ತ ಗಮನಹರಿಸಬೇಕು. ರಿಜಿಸ್ಟರ್ ನಿರ್ವಹಿಸಬೇಕು. ಕುಡಿಯಲು ಶುದ್ಧ ನೀರು ಮತ್ತು ಸ್ನಾನಕ್ಕೆ ಬಿಸಿನೀರು ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ ಬದಿ ಸ್ವಚ್ಛತೆಗೆ ಒತ್ತು ನೀಡಬೇಕು. ಸಾರ್ವಜನಿಕರ ಕುಂದು ಕೊರತೆ ಆಲಿಸಬೇಕು. ಪ್ಲಾಸ್ಟಿಕ್ ಬಿಸಾಕದಂತೆ ಅರಿವು ಮೂಡಿಸಬೇಕು. ಬೀದಿದೀಪ ಸಮರ್ಪಕ ನಿರ್ವಹಣೆ ಮಾಡಬೇಕು. ರಸ್ತೆ ಗುಂಡಿ ಮುಚ್ಚಬೇಕು. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುಪಾಲನೆ, ಕಾರ್ಮಿಕ ಇಲಾಖೆ, ಲೋಕೋಪಯೋಗಿ, ಪಂಚಾಯತ್ ರಾಜ್, ಶಾಲಾ ಶಿಕ್ಷಣ ಹೀಗೆ ವಿವಿಧ ಇಲಾಖೆಯ ಕಾರ್ಯಕ್ರಮ ಸಂಬಂಧಿಸಿದಂತೆ ಮಾಹಿತಿ ಪಡೆದರು.

ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭದಲ್ಲಿ 4 ಅರ್ಜಿಗಳು ಸಲ್ಲಿಕೆಯಾದವು. ಕಂದಾಯ ಕಂದಾಯ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದವು.

ತಹಸೀಲ್ದಾರ್‌ ಪ್ರವೀಣ್ ಕುಮಾರ್ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.