ಮಡಿಕೇರಿ: ಕೂರ್ಗ್‌ ವಿಲೇಜ್‌ ಅಭಿವೃದ್ಧಿ ಸಮಾಲೋಚನೆ

| Published : Jun 29 2024, 12:32 AM IST

ಸಾರಾಂಶ

ಮಡಿಕೇರಿಯ ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬಂಧಿಸಿದಂತೆ ಚರ್ಚೆ ನಡೆಯಿತು.

ರಾಜಾಸೀಟು ಪ್ರವೇಶ ದ್ವಾರದ ಟಿಕೆಟ್ ಕೌಂಟರ್ ಬಳಿ ಪ್ರವಾಸಿಗರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಶೆಲ್ಟರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ರಾಜಾಸೀಟನ್ನು ಮತ್ತಷ್ಟು ಕಂಗೋಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರೇಟರ್ ರಾಜಾಸೀಟು ಅಭಿವೃದ್ಧಿ ಸಂಬಂಧ ಬಾಕಿ ಇರುವ ಕಾಮಗಾರಿಗಳನ್ನು ಲೋಕೋಪಯೋಗಿ ಇಲಾಖೆ ಅವರು ಹಸ್ತಾಂತರಿಸಬೇಕು. ಅಗತ್ಯ ಇರುವ ಕಡೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ನಗರಸಭೆಯಿಂದ ನೀರು ಸಂಪರ್ಕ ಪಡೆಯುವುದು ಸೇರಿದಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಯೋಗೀಶ್ ಅವರು ರಾಜಾಸೀಟು, ಕೂರ್ಗ್ ವಿಲೇಜ್ ಅಭಿವೃದ್ಧಿ ಜೊತೆಗೆ ಗದ್ದುಗೆ ಉದ್ಯಾನವನ ಹಾಗೂ ನೆಹರು ಮಂಟಪ ಅಭಿವೃದ್ಧಿಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ರಾಜಾಸೀಟು ಉದ್ಯಾನವನ ನಿರ್ವಹಣೆ ಹಾಗೂ ಅಭಿವೃದ್ಧಿ ಸಂಬಂಧ ಕ್ರಿಯಾಯೋಜನೆಗೆ ಸಭೆಯಲ್ಲಿ ಅನುಮೋದನೆ ಪಡೆದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, ರಾಜಾಸೀಟಿನಲ್ಲಿ ಜಿಲ್ಲೆಯ ಪ್ರವಾಸಿ ಸ್ಥಳಗಳ ಬಗ್ಗೆ ಎಲ್‌ಇಡಿ ಫಲಕ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಸಹಾಯಕ ಎಂಜಿನಿಯರ್ ಸತೀಶ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ ಅವರು ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.