ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ಮಾಡದೆ ಅರ್ಥಪೂರ್ಣವಾಗಿ ದಸರಾ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಕೋರಿದ್ದಾರೆ.
ಮಡಿಕೇರಿ : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶ ಮಾಡದೆ ಅರ್ಥಪೂರ್ಣವಾಗಿ ದಸರಾ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದಸರಾ ಸಮಿತಿ ಪ್ರಮುಖರ ಜೊತೆ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಸುಪ್ರಿಂಕೋರ್ಟ್ ನಿರ್ದೇಶನವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಆ ನಿಟ್ಟಿನಲ್ಲಿ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಮಿತಿಯವರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜೊತೆ ಕೈಜೋಡಿಸುವಂತೆ ಮನವಿ ಮಾಡಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾ ಸಮಿತಿಯವರು ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಸಲಹೆ ಮಾಡಿದರು. ಪೊಲೀಸ್ ಇಲಾಖೆ ಸೂಚಿಸಿದ ಸ್ಥಳದಲ್ಲಿ ಸಿಸಿಟಿವಿ ಅಳವಡಿಸಬೇಕು. ವಾಹನ ನಿಲುಗಡೆ ಪ್ರದೇಶದಲ್ಲಿ ಬೆಳಕು ವ್ಯವಸ್ಥೆ ಮಾಡಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಸಿಬ್ಬಂದಿ ನಿಯೋಜಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹೆಚ್ಚು ಆಂಬ್ಯುಲೆನ್ಸ್ ಒದಗಿಸುವುದು, ಕೆಎಸ್‌ಆರ್‌ಟಿಸಿ ಯಿಂದ ಹೆಚ್ಚುವರಿ ಬಸ್ ಕಲ್ಪಿಸುವುದು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಜಾಗ ಕಾಯ್ದಿರಿಸುವುದು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಮರದ ಕೊಂಬೆಗಳನ್ನು ಕಡಿಯುವುದು ಮತ್ತಿತರವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮಾತನಾಡಿ ದಸರಾ ಸಂಬಂಧ ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಮಡಿಕೇರಿಯಲ್ಲಿ 27 ಹಾಗೂ ಗೋಣಿಕೊಪ್ಪದಲ್ಲಿ 15 ಕಡೆಗಳಲ್ಲಿ ಸಿಸಿಟಿವಿ ಅಳವಡಿಸಬೇಕಿದೆ ಎಂದರು. ಪಾರ್ಕಿಂಗ್ ಪ್ರದೇಶದಲ್ಲಿ ಬೆಳಕು ವ್ಯವಸ್ಥೆ ಮಾಡುವುದು, ಪ್ರವಾಸಿ ಸ್ಥಳಗಳಲ್ಲಿ ಡಿಎಫ್‌ಎಂಡಿ(ಡೋರ್ ಪ್ರೇಮ್ ಮೆಟಲ್ ಡಿಟೆಕ್ಟರ್) ಅಳವಡಿಸಬೇಕಿದೆ ಎಂದು ಹೇಳಿದರು.ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರಾದ ಅರುಣ್ ಕುಮಾರ್ ಮಾತನಾಡಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜೊತೆ ಸದಾ ಕೈಜೋಡಿಸಲಾಗುವುದು ಎಂದು ಹೇಳಿದರು.
ಹಿಂದಿನಿಂದ ನಡೆದುಕೊಂಡು ಬಂದಿರುವ ದಸರಾಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಪಾಧ್ಯಕ್ಷರಾದ ಮಹೇಶ್ ಜೈನಿ ಅವರು ಮಡಿಕೇರಿ ದಸರಾವು ವಿಜೃಂಭಣೆಯಿಂದ ನಡೆಯಲಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.ದಶಮಂಟಪ ಸಮಿತಿ ಅಧ್ಯಕ್ಷರಾದ ಪೂಣಚ್ಚ ಅವರು ಮಾತನಾಡಿ 10 ಮಂಟಪಗಳಿಗೆ ಮಾಹಿತಿ ನೀಡಲಾಗುವುದು. ಮಂಟಪಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಮಂಟಪಗಳ ವಾಹನ ಸಂಬಂಧ ಆರ್‌ಟಿಒ ಅವರು ಪ್ರಮಾಣ ಪತ್ರ ನೀಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರಿಗೆ ತಿಳಿಸಿದರು.
ಈ ಕುರಿತು ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಅವರು ಮಂಟಪದ ವಾಹನಗಳಿಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಹೇಳಿದರು. ಗೋಣಿಕೊಪ್ಪ ದಸರಾ ಸಮಿತಿ ಅಧ್ಯಕ್ಷರಾದ ಪ್ರಮೋದ್ ಗಣಪತಿ, ಡಿವೈಎಸ್‌ಪಿ ಸೂರಜ್, ಐಪಿ.ಮೇದಪ್ಪ, ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ನಿರಂಜನ, ಇತರರು ಇದ್ದರು.