ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬದುಕು, ಸಾಧನೆ, ಅವರು ಸೇನಾ ಕ್ಷೇತ್ರದಲ್ಲಿ ಬಿಟ್ಟು ಹೋಗಿರುವ ಇತಿಹಾಸವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ಕೊಡವ ಸಮಾಜದಿಂದ ಜನರಲ್ ತಿಮ್ಮಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಸೀಲ್ದಾರ್ ಶ್ರೀಧರ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಉಪಾಧ್ಯಕ್ಷರಾದ ದೇವಯ್ಯ, ಮಾಜಿ ಸೈನಿಕರು, ಹಲವು ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಬ್ಯಾಂಡ್‌ನೊಂದಿಗೆ ಗೌರವ ಸಲ್ಲಿಸಲಾಯಿತು. ಕೊಡವ ಸಮಾಜದ ನಿರ್ದೇಶಕರು, ಎನ್.ಸಿ.ಸಿ.ವಿದ್ಯಾರ್ಥಿಗಳು, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇತರರು ಪಾಲ್ಗೊಂಡಿದ್ದರು.

ಬಳಿಕ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಬದುಕು, ಸಾಧನೆ, ಅವರು ಸೇನಾ ಕ್ಷೇತ್ರದಲ್ಲಿ ಬಿಟ್ಟು ಹೋಗಿರುವ ಇತಿಹಾಸವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ಜನರಲ್ ತಿಮ್ಮಯ್ಯ ಅವರು ಸಣ್ಣ ವಯಸ್ಸಿನಲ್ಲಿಯೇ ಭಾರತೀಯ ಸೇನೆಗೆ ಸೇರ್ಪಡೆಗೊಂಡು 35 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ, ಜನರಲ್ ಆಗಿ ಸೇವೆ ಸಲ್ಲಿಸಿ ಜನಮನ್ನಣೆ ಗಳಿಸಿದ್ದು, ಜನರಲ್ ತಿಮ್ಮಯ್ಯ ಅವರ ವ್ಯಕ್ತಿತ್ವವು ಎಲ್ಲರ ಬದುಕಿನ ದಾರಿ ದೀಪವಾಗಿದೆ ಎಂದರು. ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನೆಗೆ ನೀಡಿರುವ ಕೊಡುಗೆ ಅಪಾರವಾಗಿದೆ. ತಿಮ್ಮಯ್ಯ ಅವರ ಶಿಸ್ತು, ಸಮಯ ಪ್ರಜ್ಞೆಯನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದರು. ಜನರಲ್ ತಿಮ್ಮಯ್ಯ ಅವರ ಮೌಲ್ಯಾಧಾರಿತ ಬದುಕಿನಂತೆ ನಡೆಯಬೇಕು. ಅವರು ಹುಟ್ಟಿದ ಮನೆ ಸನ್ನಿಸೈಡ್ ಸುಂದರವಾಗಿರುವುದರ ಜೊತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಶಾಸಕರಾದ ಡಾ.ಮಂತರ್‌ಗೌಡ ಅವರು ಮಾತನಾಡಿ ಭಾರತೀಯ ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಅಪಾರ ಕೊಡುಗೆ ನೀಡಿದ್ದು, ರಾಷ್ಟ್ರದ ಕಣ್ಮಣಿಯಾಗಿದ್ದಾರೆ ಎಂದು ನುಡಿದರು. ಭಾರತದಂತಹ ಬೃಹತ್ ರಾಷ್ಟ್ರದಲ್ಲಿ ದೊಡ್ಡ ಸೇನೆಯನ್ನು ಹೊಂದಿದ್ದು, ಈ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ರಾಷ್ಟ್ರ ರಕ್ಷಣೆ ಹಾಗೂ ಭಾರತೀಯ ಸೇನೆಯನ್ನು ಬಲಪಡಿಸುವಲ್ಲಿ ಶ್ರಮಿಸಿದ್ದಾರೆ ಎಂದು ಹೇಳಿದರು. ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕವಾಗಿದ್ದು, ಪ್ರೇರಣೆಯಾಗಿದ್ದಾರೆ. ಇವರ ಶಿಸ್ತು ಬದ್ಧ ಬದುಕನ್ನು ಮೈಗೂಡಿಸಿಕೊಳ್ಳಬೇಕು ಎಂದು ಡಾ.ಮಂತರ್ ಗೌಡ ಅವರು ಹೇಳಿದರು. ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆ ನಿರ್ಮಾಣಕ್ಕೆ ಈ ಹಿಂದೆ ಶ್ರಮಿಸಲಾಗಿದೆ. ಇವರು ಭಾರತೀಯ ಸೇನೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದು, ಇವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಹೇಳಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಅವರ ಸೇನಾ ಕ್ಷೇತ್ರದಲ್ಲಿನ ಸಾಧನೆ, ಕೊಡುಗೆ ಬಗ್ಗೆ ಗುಣಗಾನ ಮಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಉಪಾಧ್ಯಕ್ಷರಾದ ಕೆ.ಎ.ದೇವಯ್ಯ, ರಾಣಿ ಮಾಚಯ್ಯ, ಬೊಪ್ಪಂಡ ಸರಳ ಕರುಂಬಯ್ಯ, ಲೆ.ಕ.(ನಿ) ಎಂ. ಕಾವೇರಪ್ಪ, ಇತರರು ಇದ್ದರು.