ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.

ಮಡಿಕೇರಿ: ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‍ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು.

ದೇಶದಾದ್ಯಂತ ಆ.10ರಂದು ‘ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ’ ಹಾಗೂ ಆ.17ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿವರಿಸಿದರು. ಈ ಕಾರ್ಯಕ್ರಮವನ್ನು 2015ರ ಫೆ. 10ರಂದು ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018ರ ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 19ನೇ ಸುತ್ತಿನ ಕಾರ್ಯಕ್ರಮವಾಗಿದೆ ಎಂದರು. 1-5 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 1-2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಮಾತ್ರೆ ನೀಡಬೇಕಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೊರೇಷನ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಆರ್‌ಸಿಎಚ್ ಅಧಿಕಾರಿ ಡಾ. ಸನತ್ ಕುಮಾರ್‌ ಅಂಕಿ ಅಂಶ ನೀಡಿದರು. ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ, ತಾಲೂಕು ವೈದ್ಯಾಧಿಕಾರಿ ಸುನಿಲ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ದೇವರಾಜು, ದಿವಾಕರ, ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.