ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರತೀ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಶುಕ್ರವಾರದಿಂದ 27 ರವರೆಗೆ 4 ದಿನಗಳ ಕಾಲ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿವಿಧ ಕಲಾಕೃತಿಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಜೊತೆಗೆ ಗಾಂಧಿ ಮೈದಾನದಲ್ಲಿ ವಸ್ತುಪ್ರದರ್ಶನಕ್ಕೂ ಅವಕಾಶ ಮಾಡಲಾಗಿದೆ ಎಂದರು.
ಸಮವಸ್ತ್ರದಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ವಯಸ್ಕರಿಗೆ 20 ರು. ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಫಲಪುಷ್ಪ ಪ್ರದರ್ಶನಗನ್ನು ಬೆಳಗ್ಗೆ 8 ರಿಂದ ರಾತ್ರಿ 8.30 ಗಂಟೆ ವರೆಗೆ ವೀಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯುತ್ತಿರುವುದು ವಿಶೇಷ. ಫಲಪುಷ್ಪ ಪ್ರದರ್ಶನಕ್ಕೆ ಕಳೆದ ಬಾರಿ 32 ಲಕ್ಷ ರು. ವೆಚ್ಚವಾಗಿದ್ದು, ಈ ವರ್ಷದಲ್ಲಿ 35 ಲಕ್ಷ ರು. ಅಂದಾಜು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯಿಂದ ರಾಜ್ಯದಲ್ಲಿ ಉತ್ಪತ್ತಿಯಾಗುವ ಜೇನುತುಪ್ಪವನ್ನು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿ ಮಾರಾಟ ಮಾಡುವ ಉದ್ದೇಶದಿಂದ ‘ಝೇಂಕಾರ’ ಬ್ರಾಂಡ್ ಅಡಿಯಲ್ಲಿ ನೊಂದಾಯಿಸಲ್ಪಟಿದ್ದು, ‘ಝೇಂಕಾರ ಬ್ರಾಂಡ್’ ಹಾಗೂ ಕೊಡಗು ಜೇನಿನ ‘ಕೂರ್ಗ್ ಹನಿ’ ಮಾರಾಟ ಬ್ರ‍್ಯಾಂಡ್ ಗಳ ವಿವಿಧ ಕಲಾಕೃತಿಗಳನ್ನು ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ ಎಂದರು.ಪುಟಾಣಿ ರೈಲು ದುರಸ್ತಿ:
ಪುಟಾಣಿ ರೈಲು ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮೈಸೂರಿನಿಂದ ರೈಲ್ವೆ ತಜ್ಞ ಎಂಜಿನಿಯರ್‌ಗಳನ್ನು ಕರೆಸಲಾಗಿತ್ತು, ತಾಂತ್ರಿಕ ತಜ್ಞರು ವೀಕ್ಷಿಸಿದ್ದು, ವರದಿ ಬಂದ ನಂತರ ರಾಜಾಸೀಟಿನ ಪುಟಾಣಿ ರೈಲು ಸರಿಪಡಿಸಲಾಗುವುದು ಎಂದು ನುಡಿದರು.ಸಂಗೀತ ಕಾರಂಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸಂಗೀತ ಕಾರಂಜಿ ಸರಿಪಡಿಸುವ ತಂತ್ರಜ್ಞರು ಮುಂದೆ ಬರುತ್ತಾ ಇಲ್ಲ. ಈ ಹಿನ್ನೆಲೆ ದೆಹಲಿಯಿಂದ ತಾಂತ್ರಿಕ ತಜ್ಞರನ್ನು ಕರೆಸಲಾಗಿದ್ದು, ಶೀಘ್ರ ಸರಿಪಡಿಸಲಾಗುವುದು ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆ ಉಪ ನಿದೇಶಕರಾದ ಎಚ್.ಆರ್.ಯೋಗೇಶ್ ಫಲಪುಷ್ಪ ಪ್ರದರ್ಶನ ಪ್ರಯುಕ್ತ ನಗರದ ಗಾಂಧಿ ಮೈದಾನದಲ್ಲಿ 60 ಸಂಖ್ಯೆಯ ವಿವಿಧ ಇಲಾಖೆಗಳು, ಏಜೆನ್ಸಿಗಳು, ಸಂಸ್ಥೆಗಳ ಮಳಿಗೆಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್ಸ್, ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು.ಅತ್ಯುತ್ತಮ ಪ್ರದರ್ಶನಕ್ಕೆ ಬಹುಮಾನ:
ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶಿಕೆಗಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು ವಿವರಿಸಿದರು.ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತರು ಶುಕ್ರವಾರದಿಂದಲೇ ಅಥವಾ ನೇರವಾಗಿ ಜ.24 ರಂದು ಬೆಳಗ್ಗೆ 8 ಗಂಟೆಯಿಂದ ರಾಜಾಸೀಟು ಉದ್ಯಾನವನದಲ್ಲಿ (ದೂರವಾಣಿ ಸಂಖ್ಯೆ: 9448613355) ಹೆಸರು ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಎಂದು ಯೋಗೇಶ್ ತಿಳಿಸಿದರು.
ಜಾನಪದ ಪರಿಷತ್ತು ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್ ಫಲಪುಷ್ಪ ಪ್ರದರ್ಶನ ಸಂದರ್ಭದಲ್ಲಿ ವಾಹನ ದಟ್ಟಣೆಯಿಂದಾಗಿ ಹಿರಿಯ ನಾಗರಿಕರು ಹಾಗೂ ಮಕ್ಕಳಿಗೆ ಕಿರಿಕಿರಿ ಉಂಟಾಗಲಿದೆ. ಆದ್ದರಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಫಣೀಂದ್ರ, ಸಹಾಯಕ ನಿರ್ದೇಶಕರಾದ ಬಿ.ಎಸ್.ಮುತ್ಪಪ್ಪ ಇತರರು ಇದ್ದರು. ..................
ವಿವಿಧ ಇಲಾಖೆಗಳ ಸಹಯೋಗತೋಟಗಾರಿಕೆ ಇಲಾಖೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿದೆ.ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಲಿದ್ದು, ಜಿಲ್ಲೆಯ ಶಾಸಕರು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ.
ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 7,000 ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳು ಹಾಗೂ ಬೆಡ್‌ಗಳಲ್ಲಿ ಸುಮಾರು 20,000 ವಿವಿಧ ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಇಂಪೇಷಿಯನ್ಸ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳು: ಕೊಡಗಿನ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಸ್ಥಾನದ ಕಲಾಕೃತಿಯನ್ನು 22 ಅಡಿ ಎತ್ತರದಲ್ಲಿ 30 ಅಡಿ ಉದ್ದ, 38 ಅಡಿ ಅಗಲದಲ್ಲಿ ವಿವಿಧ ಬಣ್ಣಗಳ ಗುಲಾಬಿ, ಸೇವಂತಿಗೆ, ಆಸ್ಟರ್ ಜಾತಿಯ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.
ಹೂ ಹಾಗೂ ಜೇನು ಹುಳುವಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಗಣರಾಜ್ಯೋತ್ಸವದ ಅಂಗವಾಗಿ ಯೋಧ, ಪಿರಂಗಿ ಹಾಗೂ ರಾಷ್ಟ್ರದ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.ವಿಂಟೇಜ್ ಕಾರಿನ ಕಲಾಕೃತಿಯನ್ನು ವಿವಿಧ ಬಣ್ಣದ ಹೂವಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ಪ್ರವೇಶದ್ವಾರ, ಪ್ರಾಣಿ ಮುಖದ ಕಲಾಕೃತಿಯನ್ನು ಹೂವುಗಳಿಂದ ನಿರ್ಮಾಣ ಮಾಡಲಾಗುವುದು. ಮಕ್ಕಳಿಗೆ ಮನರಂಜನೆ ನೀಡುವಂತಹ ಬಾರ್ಬಿ ಡಾಲ್, ಡೊರೆಮಾನ್, ಮೋಟು ಪಟ್ಲು ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಫ್ರೆಮ್ ಮಾದರಿಯನ್ನು ನಿರ್ಮಿಸಲಾಗುವುದು. ವಿವಿಧ ಕ್ಷೇತ್ರಗಳ ಗಣ್ಯರು ಗಳ ಕಲಾಕೃತಿಗಳನ್ನು ಹಣ್ಣು/ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗಿದೆ.
ವಿವಿಧ ಅಲಂಕಾರಿಕ ಗಿಡಗಳು ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶನಗಳನ್ನು ಏರ್ಪಾಡಿಸಲಾಗುತ್ತಿದೆ. ಈ ರೀತಿಯಾಗಿ 16 ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 8 ರಿಂದ 10 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.