ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಜನರು ವ್ಯಸನದ ದಾಸರಾಗದೇ ಆತ್ಮಗೌರವದ ಮೂಲಕ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಹಾಗೂ ದುಶ್ಚಟಗಳನ್ನು ದೂರ ಮಾಡಲು ಜೋಳಿಗೆ ಹಿಡಿದ ಮಹನೀಯರು ಡಾ.ಮಹಾಂತ ಸ್ವಾಮಿಗಳು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಾ.ಮ.ನಿ.ಪ್ರ.ಮಹಾಂತ ಶ್ರೀಗಳ ಜಯಂತಿ ಪ್ರಯುಕ್ತ ನಡೆದ ವ್ಯಸನಮುಕ್ತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ವ್ಯಸನಕ್ಕೆ ದಾಸರಾದ ಅನೇಕ ಕುಟುಂಬಗಳು ಸಂಕಷ್ಟದಲ್ಲಿರುವುದನ್ನು ಮನಗಂಡು ದುಶ್ಚಟಗಳ ತೊಲಗಿಸಲು ಶ್ರಮವಹಿಸಿ ಅನೇಕ ಯುವಜನರ, ಕುಟುಂಬಗಳ ಸುಧಾರಣೆ ತರುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ಎಲ್ಲ ವರ್ಗದವರ ಮನೆಮನೆಗೂ ತೆರಳಿ, ಮದ್ಯವ್ಯಸನ, ತಂಬಾಕು ಸೇವನೆ, ಧೂಮಪಾನ, ಆಲಸ್ಯತನ, ಸುಳ್ಳು ಹೇಳುವುದು, ಅಪ್ರಾಮಾಣಿಕತೆ ಅಂತಹ ಕೆಟ್ಟ ವ್ಯಸನಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಳ್ಳುವ ಮೂಲಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಹಗಲಿರುಳು ಶ್ರಮಿಸಿದ್ದಾರೆ ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ, ಮನಸ್ಸು, ದೇಹ, ಕುಟುಂಬ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನಕ್ಕೆ ಅಂಟಿಕೊಳ್ಳುವುದು ಸಾಮಾಜಿಕ ಪಿಡುಗಾಗಿದೆ. ವ್ಯಸನಗಳ ಬಗ್ಗೆ ಯುವಜನರು ದೂರವಿರಬೇಕು. ದುಷ್ಚಟಗಳಿಗೆ ಬಲಿಯಾಗದೇ ತಮ್ನನ್ನು ಕುಂಟುಬದ ಶ್ರೇಯಸ್ಸಿಗಾಗಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದರು.
ಸಾಹಿತಿ ಗಣೇಶ ಅಮೀನಗಡ ಹಾಗೂ ಮನೋರೋಗ ತಜ್ಞರಾದ ಡಾ.ಮಂಜುನಾಥ ಮಸಳಿ ಅವರು ಡಾ.ಮಹಾಂತ ಶ್ರೀಗಳ ಬಗ್ಗೆ ಉಪನ್ಯಾಸ ನೀಡಿದರು.ಈ ವೇಳೆ ಮದ್ಯಪಾನ, ಮಾದಕ ವಸ್ತು, ತಂಬಾಕು ವಸ್ತುಗಳ ವ್ಯಸನ ಮುಕ್ತಗೊಳಿಸುವ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋಧ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಮಂಜುಳಾ ದುರಗನ್ನವರ, ಜಿ.ಬಿ.ತಾಟೆ ಸೇರಿ ಹಲವರು ಇದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಸ್ವಾಗತಿಸಿದರು. ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ನಿರೂಪಿಸಿದರು.
ಜನಜಾಗೃತಿ ಜಾಥಾ:ಡಾ.ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ ವ್ಯಸನಮುಕ್ತ ದಿನ ಜಾಥಾಗೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಶೇಖರ ಹೊಸಮನಿ ಉಪಸ್ಥಿತರಿದ್ದರು. ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಿಗೆ ದುಷ್ಚಟಗಳ ದುಷ್ಪರಿಣಾಮಗಳ ಬಗ್ಗೆ ಕರಪತ್ರ ವಿತರಿಸಿ ಜಾಗೃತಿ ಮೂಡಿಸಿದರು.
ಉಚಿತ ಆರೋಗ್ಯ ತಪಾಸಣೆ ಶಿಬಿರ: ವ್ಯಸನಮುಕ್ತ ದಿನದ ಸಂದರ್ಭ ರಾಷ್ಟ್ರೀಯ ಕ್ಯಾನ್ಸರ್, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ ಹಾಗೂ ಪಾರ್ಶ್ವವಾಯು ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆರೋಗ್ಯ ಇಲಾಖೆಯಿಂದ ನಡೆಯಿತು. ಈ ವೇಳೆ ಶಿಬಿರದ ಸಂಪೂರ್ಣ ಮಾಹಿತಿ ಪಡೆದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸ್ವತಃ ರಕ್ತ ತಪಾಸಣೆ ಮಾಡಿಸಿಕೊಂಡರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಇದ್ದರು.