ಸಾರಾಂಶ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಈ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ದೊಡ್ಡದು. ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯಗಳು ಇಡೀ ಜಗತ್ತನ್ನೇ ಬೆರಗುಗೊಳಿಸಿವೆ ಎಂದರು.ರಾಮಾಯಣ, ಮಹಾಭಾರತ ಮಹಾಕಾವ್ಯಗಳಲ್ಲಿರುವ ಜೀವನ ಮೌಲ್ಯಗಳೇ ಇಂದು ಕುಟುಂಬ ಪದ್ಧತಿಯ ಜೀವ ಸೆಳೆ. ರಾಮಯಾಣದಲ್ಲಿ ರಾಮನ ನಡೆ ಹಾಗೂ ಮಹಾಭಾರತದಲ್ಲಿ ಕೃಷ್ಣನ ನುಡಿಯಂತೆ ಸದಾ ಜೀವನದಲ್ಲಿ ಆಳವಡಿಸಿಕೊಂಡು ನಾವು ಮುನ್ನಡೆಯಬೇಕು ಎಂದವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ಮಹಾಕಾವ್ಯಗಳು ದೇಶದ ಗಡಿ ದಾಟುವ ಜತೆಗೆ ಮಣ್ಣಿನ ಗುಣವನ್ನು ಬೆಳೆಸಿಕೊಂಡು ಎಲ್ಲ ಕಾಲಕ್ಕೂ ಎಲ್ಲ ಪ್ರದೇಶಗಳಲ್ಲಿರುವ ಜನಮಾನಸದಲ್ಲಿ ನೆಲೆಯೂರಿ ಬಿಡುತ್ತದೆ ಎಂದರು.ಮೂಲ್ಕಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ವಾಸುದೇವ ಬೆಳ್ಳೆ ಅವರು ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದರು. ಅತೀ ಹೆಚ್ಚು ಅಂಕ ಗಳಿಸಿದ ಎಸ್ಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭ ದ.ಕ. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ರಾಜು, ಜಿ.ಪಂ. ಉಪಕಾರ್ಯದರ್ಶಿ ಜಯಲಕ್ಷ್ಮಿ, ಡಿಸಿಪಿ ಮಿಥುನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ರಾಜೇಶ್ವರಿ ಎಚ್.ಎಚ್, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶಶಿಧರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಬಸವರಾಜು ಎಚ್.ಸಿ. ಇದ್ದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು. ಮಂಜುಳಾ ಶೆಟ್ಟಿ ನಿರೂಪಿಸಿದರು.