ಸಾರಾಂಶ
ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತದಿರುವುದು ನಾಚಿಕೆಗೇಡು
ಬಳ್ಳಾರಿ: ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಕಾಂಗ್ರೆಸ್‌ನ ಮಹಿಳಾ ಘಟಕದ ಸದಸ್ಯರು, ಮಹಿಳಾ ದೌರ್ಜನ್ಯ ಪ್ರಕರಣದ ಆರೋಪಿಗಳಾದ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರಲ್ಲದೆ, ಪ್ರಜ್ವಲ್ ರೇವಣ್ಣ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ತಾವು ಮಹಿಳೆಯರ ಪರ ಎಂದು ಹೇಳಿಕೊಳ್ಳುವ ಪ್ರಧಾನಿ ಮೋದಿ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೌನ ವಹಿಸಿದ್ದಾರೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ, ಮಹಿಳಾ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಧ್ವನಿ ಎತ್ತದಿರುವುದು ನಾಚಿಕೆಗೇಡು ಎಂದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ಮಾತನಾಡಿ, ಪ್ರಜ್ವಲ್ ರೇವಣ್ಣ ರಾಜ್ಯದ ಮರ್ಯಾದೆಯನ್ನು ಹರಾಜು ಹಾಕಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ಆಗಲೇಬೇಕು. ಅನ್ಯಾಯವಾಗಿರುವ ಮಹಿಳೆಯರಿಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜೀನೆಯಲು, ಪಕ್ಷದ ಜಿಲ್ಲಾ ಕಾರ್ಯದರ್ಶಿ ಶೋಭಾ ಕಾಳಿಂಗ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಜ್ಯೋತಿ, ಮಲ್ಲಮ್ಮ, ಪದ್ಮಾ, ರಾಜ್ಯ ಉಪಾಧ್ಯಕ್ಷೆ ಜಯಲಕ್ಷ್ಮೀ ಸೇರಿದಂತೆ ಪಕ್ಷದ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.