ಸಾರಾಂಶ
- ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚನೆ
----ಕನ್ನಡಪ್ರಭ ವಾರ್ತೆ ಮೈಸೂರು
ಪಿಎಂ ಜನ್ಮನ್ ಯೋಜನೆಯು ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಗುರಿ ಹೊಂದಿರುವ ಸರ್ಕಾರದ ಯೋಜನೆಯಾಗಿದ್ದು, ಈ ನಿಟ್ಟಿನಲ್ಲಿ ನೇಮಕವಾಗಿರುವ ನೋಡೆಲ್ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪಿಎಂ ಜನ್ಮನ್ ಯೋಜನೆಯ ಅನುಷ್ಠಾನಕ್ಕೆ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರಿನ ಪ್ರವೇಶ, ಸುಧಾರಿತ ಆರೋಗ್ಯ, ಶಿಕ್ಷಣ, ಪೋಷಣೆ, ರಸ್ತೆ ಮತ್ತು ದೂರಸಂಪರ್ಕ, ಜೊತೆಗೆ ಸುಸ್ಥಿರ ಜೀವನೋಪಾಯಕ್ಕಾಗಿ ಅವಕಾಶಗಳನ್ನು ಒಳಗೊಂಡಂತೆ ಈ ಸೌಲಭ್ಯಗಳು ಬುಡಕಟ್ಟು ಸಮುದಾಯದ ಅರ್ಹ ಫಲಾನುಭವಿಗಳಿಗೆ ಸಿಗುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ 153 ಹಾಡಿಗಳಲ್ಲಿ ಬುಡಕಟ್ಟು ಸಮುದಾಯದ ಜನರು ಇರುತ್ತಾರೆ. ಜೇನು ಕುರುಬ ಸಮುದಾಯದವರು ಈಗಲೂ ಕಚ್ಚಾ ಮನೆಗಳಲ್ಲಿ ವಾಸ ಮಾಡುತ್ತಿದ್ದಾರೆ. ಅವರಿಗೆ ಪಕ್ಕಾ ಮನೆ ನಿರ್ಮಾಣ ಮಾಡಿ ನೀಡಬೇಕು. ಹಾಗೂ ಸೌಲಭ್ಯ ವಂಚಿತ ಬುಡಕಟ್ಟು ಸಮುದಾಯದ ಅರ್ಹ ಫಲಾನುಭವಿಗಳಿಗೆ ಗುರುತಿಸಿ ನೀಡಬೇಕು. 15 ವರ್ಷ ಹಳೆಯ ಮನೆಗಳು ಇದ್ದರೂ ಅಂತಹವರನ್ನು ಗುರುತಿಸಿ ಸೌಲಭ್ಯಗಳನ್ನು ನೀಡಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದರು.ತಾಲೂಕು ತಹಸೀಲ್ದಾರ್ ಅವರು ಈ ಯೋಜನೆಯಡಿ ಸೌಲಭ್ಯಗಳನ್ನು ನೀಡಲು ಎರಡು ಗಂಟೆ ಪ್ರತಿದಿನ ಕೆಲಸ ನಿರ್ವಹಿಸಬೇಕು. ಯಾವುದೇ ಹಾಡಿಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಆಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಅವರು ತಿಳಿಸಿದರು.
ಹಾಡಿಗಳಲ್ಲಿ ಅಧಿಕಾರಿಗಳು ಸಭೆ ನಡೆಸಿ ಸೂರು ಇಲ್ಲದವರಿಗೆ, ಕುಡಿಯುವ ನೀರು, ಗ್ರಾಮ ಸಡಕ್ ಯೋಜನೆಯಡಿ ರಸ್ತೆ ನಿರ್ಮಾಣ, ಆಧಾರ್ ನೋಂದಣಿ, ಜಾತಿ ಹಾಗೂ ಜನನ ಪ್ರಮಾಣ ಪತ್ರ ಮಾಡಿಸುವುದು, ಎಪಿಕ್ ಕಾರ್ಡ್ ಮಾಡಿಸುವ ಬಗ್ಗೆ ನೋಡೆಲ್ ಅಧಿಕಾರಿಗಳು ಗಮನ ಹರಿಸಬೇಕು ಎಂದು ಅವರು ಹೇಳಿದರು.ಎಚ್.ಡಿ. ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳ ಹಾಡಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಡಿಗಳಿಗೆ ಭೇಟಿ ನೀಡಿ, ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡಿ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೆಲಸ ಮಾಡಲು ಮುಂದಾಗಬೇಕು ಎಂದು ಅವರು ತಿಳಿಸಿದರು.
ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಲೋಕನಾಥ್, ಹುಣಸೂರು ಉಪ ವಿಭಾಗಾಧಿಕಾರಿ ಹ್ಯಾರಿಸ್ ಸುಮೈರ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಎನ್. ಮುನಿರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.