ಸಾರಾಂಶ
ಉಡುಪಿ: ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲೆಯಲ್ಲಿನ ಪಶುಗಳ ಆರೋಗ್ಯ ಸುಧಾರಣೆಗೆ ನೇಮಕಗೊಂಡಿರುವ ಮೈತ್ರಿ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡಬೇಕೆಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್ ಕರೆ ನೀಡಿದರು.ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ಆಯೋಜಿಸಲಾದ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೈತ್ರಿ ಕಾರ್ಯಕರ್ತರಿಗೆ ಈಗಾಗಲೇ ಮೂರು ತಿಂಗಳ ತರಬೇತಿ ನೀಡಲಾಗಿದೆ. ಇವರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ತಮ್ಮ ಪಶು ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾನುವಾರುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವುಗಳ ಆರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ಅಗತ್ಯ ಸಲಹೆ ಸೂಚನೆ ಹಾಗೂ ಚಿಕಿತ್ಸೆಯನ್ನು ನೀಡಬೇಕು ಎಂದರು.ಮೈತ್ರಿ ಕಾರ್ಯಕರ್ತರಿಗೆ ಪ್ರಸ್ತುತ 3700 ರು. ಗೌರವಧನವನ್ನು ನೀಡಲಾಗುತ್ತಿದೆ. ಇದರ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆ. ಈ ಬಗ್ಗೆ ಕೇಂದ್ರದ ಹೈನುಗಾರಿಕೆ ಸಚಿವರ ಗಮನಕ್ಕೆ ತರಲಾಗಿದೆ. ಇದರ ಜೊತೆಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹೆಚ್ಚಳ ಮಾಡುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.ಪಶುಪಾಲನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳುವ ಮೂಲಕ ಖಾಲಿ ಹುದ್ದೆಗಳನ್ನು ತುಂಬುವ ಕೆಲಸವಾಗುತ್ತಿದೆ. ಗ್ರಾಮಾಂತರ ಪ್ರದೇಶದ ಜನರ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಇಲಾಖೆಗೆ ಸಂಬಂಧಿಸಿದಂತೆ ಇರುವ ಕುಂದುಕೊರತೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಲಾಗುವುದು ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಗೋಪಾಲಕರ ನಾಡಾಗಿರುವ ಉಡುಪಿ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಹೈನುಗಾರಿಕೆಗೆ ಇನ್ನೂ ಹೆಚ್ಚಿನ ಶಕ್ತಿ ಹಾಗೂ ಪ್ರೋತ್ಸಾಹ ತುಂಬುವ ಕೆಲಸವಾಗಬೇಕು ಎಂದರು.ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮೂಕ ಪ್ರಾಣಿಗಳ ಆರೋಗ್ಯ ಸಂರಕ್ಷಣೆ ಮಾಡುವಂತಹ ಪುಣ್ಯದ ಕೆಲಸವನ್ನು ಮೈತ್ರಿ ಕಾರ್ಯಕರ್ತರುಗಳು ಮಾಡುತ್ತಿದ್ದು, ತರಬೇತಿಯಲ್ಲಿ ಪಡೆದ ಅನುಭವವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮೈಸೂರು ಜಂಟಿ ನಿರ್ದೇಶಕ ಡಾ. ಶಿವಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಥಮ ಬಾರಿಗೆ ಜಿಲ್ಲೆಯಲ್ಲಿ 26 ಮೈತ್ರಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.ಕಿರುಚಿತ್ರ ಪ್ರದರ್ಶನ:
ಇದೇ ಸಂದರ್ಭ ಜಿಲ್ಲೆಯ ಪಶುಪಾಲನಾ ಇಲಾಖೆಯ ಕೆಲವು ಕಾರ್ಯಕ್ರಮಗಳ ಬಗ್ಗೆ ಕಿರುಚಿತ್ರಣ ಪ್ರದರ್ಶಿಸಲಾಯಿತು. ಮೈತ್ರಿ ಕಾರ್ಯಕರ್ತರಿಗೆ ಮೈತ್ರಿ ಕಿಟ್ ಅನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಪ್ರಾಣಿಗಳ ಜನನ ನಿಯಂತ್ರಣ ಹಾಗೂ ಹುಚ್ಚುರೋಗ ನಿರೋಧಕ ಲಸಿಕೆ ಮಾಹಿತಿ ಒಳಗೊಂಡ ಕರಪತ್ರವನ್ನು ಸಚಿವರು ಬಿಡುಗಡೆಗೊಳಿಸಿದರು.ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ. ಮಂಜುನಾಥ್ ಎಸ್. ಪಾಳೇಗಾರ್, ಪಶು ವೈದ್ಯಕೀಯ ಪರಿಷತ್ತಿನ ನಿರ್ದೇಶಕ ಡಾ.ಸುಶಾಂತ್ ರೈ, ಮಂಗಳೂರು ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ, ಜಿಲ್ಲಾಮಟ್ಟದ ಅಧಿಕಾರಿಗಳು, ಇಲಾಖೆ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು ಹಾಗೂ ಮತ್ತಿತರು ಉಪಸ್ಥಿತರಿದ್ದರು.ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಡಾ. ಎಂ.ಸಿ. ರೆಡ್ಡಪ್ಪ ಸ್ವಾಗತಿಸಿದರು. ಮುಖ್ಯ ಪಶು ವೈದ್ಯಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.