ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ರೈತರು ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಬೆಳೆ ಬೆಳೆಸಿದರೂ ಕಟಾವಿನ ಸಮಯದಲ್ಲಿ ಕಾಡಾನೆಗಳ ದಾಳಿಗೆ ಬೆಳೆ ನಾಶವಾಗುತ್ತಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದೀಗ ಕಾಡಾನೆಗಳ ಹಿಂಡು ಮನೆಗಳ ಬಳಿಗೂ ಬರುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗೆ ಬರಲು ನಿವಾಸಿಗಳು ಆತಂಕಪಡುತ್ತಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಸುರಕ್ಷತೆಯ ಬಗ್ಗೆಯೂ ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದು ದಿನದೂಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಬೇಲೂರು
ತಾಲೂಕಿನ ಬಿಕ್ಕೋಡು ಹೋಬಳಿಯ ಜಗಬೋರನಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ನೂರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿರುವ ಜೋಳದ ಬೆಳೆಯನ್ನು ಕಾಡಾನೆಗಳು ನಾಶಮಾಡಿ ಅಪಾರ ನಷ್ಟವನ್ನು ಉಂಟುಮಾಡಿವೆ.ಆನೆಗಳ ಹಾವಳಿಯಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಬರದ ಪರಿಸ್ಥಿತಿಯ ನಡುವೆಯೇ ಕಾಡಾನೆಗಳ ಕಾಟದಿಂದ ಬೆಳೆಗಳನ್ನು ಕಳೆದುಕೊಳ್ಳುತ್ತಿರುವ ರೈತರ ಪರಿಸ್ಥಿತಿ ಕರುಣಾಜನಕವಾಗಿದೆ. ಗ್ರಾಮದ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿರುವ ಜೋಳದ ಬೆಳೆ ಕಾಡಾನೆಗಳ ಪಾಲಾಗುತ್ತಿದೆ. ಜೋಳದ ಜೊತೆಗೆ ಶುಂಠಿ, ಅಡಕೆ ಸೇರಿದಂತೆ ವಿವಿಧ ಬೆಳೆಗಳಿಗೂ ಕಾಡಾನೆಗಳು ಹಾನಿ ಮಾಡುತ್ತಿವೆ. ರಾತ್ರಿ ವೇಳೆ ಗುಂಪು ಗುಂಪಾಗಿ ಗ್ರಾಮಕ್ಕೆ ನುಗ್ಗುವ ಕಾಡಾನೆಗಳು ಹೊಲಗಳಿಗೆ ತೆರಳಿ ಬೆಳೆಗಳನ್ನು ತುಳಿದು ನಾಶಪಡಿಸುತ್ತಿರುವುದರಿಂದ ರೈತರು ಅಪಾರ ನಷ್ಟ ಅನುಭವಿಸುವಂತಾಗಿದೆ. ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ರೈತರು ರಾಗಿ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ಹಿಂದೇಟು ಹಾಕುತ್ತಿದ್ದಾರೆ. ವರ್ಷವಿಡೀ ಕಷ್ಟಪಟ್ಟು ಬೆಳೆ ಬೆಳೆಸಿದರೂ ಕಟಾವಿನ ಸಮಯದಲ್ಲಿ ಕಾಡಾನೆಗಳ ದಾಳಿಗೆ ಬೆಳೆ ನಾಶವಾಗುತ್ತಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದೀಗ ಕಾಡಾನೆಗಳ ಹಿಂಡು ಮನೆಗಳ ಬಳಿಗೂ ಬರುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗೆ ಬರಲು ನಿವಾಸಿಗಳು ಆತಂಕಪಡುತ್ತಿದ್ದಾರೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಸುರಕ್ಷತೆಯ ಬಗ್ಗೆಯೂ ಗ್ರಾಮಸ್ಥರು ಜೀವವನ್ನು ಕೈಯಲ್ಲಿ ಹಿಡಿದು ದಿನದೂಡುತ್ತಿದ್ದಾರೆ.ಕಾಡಾನೆಗಳ ಹಾವಳಿಯಿಂದ ಗ್ರಾಮಸ್ಥರ ಬದುಕು ಮೂರಾಬಟ್ಟೆಯಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಕಾಡಾನೆಗಳು ಗ್ರಾಮ ಹಾಗೂ ಕೃಷಿ ಪ್ರದೇಶಗಳಿಗೆ ಬಾರದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕಾಡಾನೆಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥ ಯೋಗೇಶ್ ಒತ್ತಾಯಿಸಿದ್ದಾರೆ. ಬರದಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಕಾಡಾನೆಗಳ ಹಾವಳಿ ಮತ್ತೊಂದು ದೊಡ್ಡ ಹೊಡೆತವಾಗಿದ್ದು ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.