ಸಾರಾಂಶ
ಡಿ. 3ರಿಂದ ಕೊಪ್ಪಳದಲ್ಲಿ ಸೇನಾ ಭರ್ತಿ ರ್‍ಯಾಲಿ: ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಕೊಪ್ಪಳಭಾರತೀಯ ಸೇನೆಯಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಕೊಪ್ಪಳದಲ್ಲಿ ಸೇನಾ ನೇಮಕಾತಿ ರ್‍ಯಾಲಿ ನಡೆಯಲಿದ್ದು, ಈ ರ್‍ಯಾಲಿಗೆ ಸಕಲ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ವತಿಯಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. 3ರಿಂದ ಡಿ.15 ರವರೆಗೆ ಸೇನಾಪಡೆಯ ನೇಮಕಾತಿ ರ್‍ಯಾಲಿ ನಡೆಯಲಿದೆ. ಈ ರ್‍ಯಾಲಿಯಲ್ಲಿ ಬೆಳಗಾವಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಲಿದ್ದು, ಈ ನೇಮಕಾತಿ ರ್‍ಯಾಲಿಯನ್ನು ಸುಗಮವಾಗಿ ನಡೆಸಬೇಕಾಗಿದೆ. ನೇಮಕಾತಿ ರ್‍ಯಾಲಿ ವೇಳೆ ಯಾವುದೇ ಅಭ್ಯರ್ಥಿಗಳಿಗೆ ತೊಂದರೆ ಆಗದಂತೆ, ಕ್ರೀಡಾಂಗಣದಲ್ಲಿ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯ, ಅಗತ್ಯ ಕುಡಿಯುವ ನೀರು, ವಿದ್ಯುತ್ ದೀಪದ ವ್ಯವಸ್ಥೆ, ಕ್ರೀಡಾಂಗಣ ಬಳಿ ಹಣ್ಣು, ಉಪಾಹಾರದ ಮಳಿಗೆಗಳು ಮುಂತಾದ ವ್ಯವಸ್ಥೆ ಅಚ್ಚುಕಟ್ಟಾಗಿ ಆಗಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ, ಶಿಸ್ತುಬದ್ಧ ವ್ಯವಸ್ಥೆ ಕೈಗೊಳ್ಳಬೇಕು. ಈ ಹಿನ್ನೆಲೆ ಆಯಾ ಇಲಾಖೆಗಳಿಗೆ ಹಂಚಿಕೆ ಮಾಡಲಾಗಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಳಗಾವಿಯ ಸೇನಾ ಭರ್ತಿ ಕಾರ್ಯಾಲಯದ ನೇಮಕಾತಿ ನಿರ್ದೇಶಕ ನಿಶಾಂತ್ ಶೆಟ್ಟಿ ಮಾತನಾಡಿ, ಡಿ. 3ರಿಂದ 15ರವರೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸೇನ ನೇಮಕಾತಿ ರ್‍ಯಾಲಿಯಲ್ಲಿ ರಾಜ್ಯದ ಬೆಳಗಾವಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ್ ಮತ್ತು ರಾಯಚೂರು ಸೇರಿ ಈ ಆರು ಜಿಲ್ಲೆಗಳಿಂದ 9130 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಕರ್ನಲ್ ಎ.ಕೆ. ಉಪಾಧ್ಯಾಯ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ತುಂಬಾ ಅಚ್ಚುಕಟ್ಟಾಗಿ ಸೇನಾ ನೇಮಕಾತಿ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದ್ದು, ಅದರಂತೆ ಈ ಬಾರಿಯೂ ಸೇನಾಪಡೆಯ ನೇಮಕಾತಿ ರ್‍ಯಾಲಿಯನ್ನು ಕೊಪ್ಪಳದಲ್ಲಿ ಏರ್ಪಡಿಸಲಾಗುತ್ತಿದೆ. ಈ ನೇಮಕಾತಿ ರ್‍ಯಾಲಿ ಸಮರ್ಪಕವಾಗಿ ಆಯೋಜಿಸಲು ಕೊಪ್ಪಳ ಜಿಲ್ಲಾಡಳಿತ ಹಾಗೂ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮೇಜರ್ ಎ. ವಿಶ್ವನಾಥ ಹಾಗೂ ಸುಬೇದಾರ ಮೇಜರ್ ದಿನೇಶ್ ಲೋಹಿಯಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ, ಕೊಪ್ಪಳ ತಹಸೀಲ್ದಾರ ವಿಠ್ಠಲ್ ಜಾಬಗೌಡರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ ಸೇರಿದಂತೆ ಮತ್ತಿತರರಿದ್ದರು.