ಸಾರಾಂಶ
ಗದಗ: ಜಿಲ್ಲೆಯಲ್ಲಿ ಆ.15 ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಯಾವುದೇ ಲೋಪದೋಷಗಳಿಲ್ಲದಂತೆ ಸಕಲ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ಆ.14 ಹಾಗೂ ಸ್ವಾತಂತ್ರ್ಯೋತ್ಸವದ ದಿನ ಆ.15 ರಂದು ನಗರದ ಪ್ರಮುಖ ವೃತ್ತಗಳಲ್ಲಿ ಹಾಗೂ ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ದೀಪಾಲಂಕಾರದ ವ್ಯವಸ್ಥೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.ಆ.15 ರಂದು ಬೆಳಗ್ಗೆ 7.30 ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ರಾಷ್ಟ್ರ ಧ್ವಜಾರೋಹಣ ಜರುಗುವುದು.ತದ ನಂತರ ಶಾಲಾ ಮಕ್ಕಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಗರದ ಜಿಲ್ಲಾ ಕ್ರೀಡಾಂಗಣಕ್ಕೆ ಧ್ವಜಾರೋಹಣ ಕಾರ್ಯಕ್ರಮಕ್ಕೆ ಯಾವುದೇ ಗೊಂದಲಗಳಾಗದಂತೆ ಮುಂಚಿತವಾಗಿಯೇ ಹಾಜರಿರಬೇಕಾಗುತ್ತದೆ. ಸ್ವಾತಂತ್ರ್ಯೋತ್ಸವ ದಿನಾಚರಣೆ ಜರುಗುವ ಕಾರ್ಯಕ್ರಮದ ಸ್ಥಳದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ರಾಷ್ಟ್ರೀಯ ಹಬ್ಬ ಇದಾಗಿರುವುದರಿಂದ ಎಲ್ಲ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಪ್ಪದೇ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣವು ಆ.15 ರಂದು ಬೆಳಗ್ಗೆ 9 ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಧ್ವಜ ಸ್ತಂಭದ ವ್ಯವಸ್ಥೆ, ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರ ಸನ್ಮಾನದ ವ್ಯವಸ್ಥೆ ಅಚ್ಚುಕಟ್ಟಾಗಿ ನಡೆಯಬೇಕು ಎಂದು ಸೂಚಿಸಿದರು.ಶಾಲಾ-ಕಾಲೇಜು ಮಕ್ಕಳು ಹಾಗೂ ಶಿಕ್ಷಕ ವೃಂದದವರಿಗೆ ಸೂಕ್ತ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ಕಾರ್ಯಕ್ರಮಕ್ಕೆ ಆಗಮಿಸುವಾಗ ಹಾಗೂ ಕಾರ್ಯಕ್ರಮದ ನಂತರ ಮರಳಿ ಹೋಗುವಾಗ ಸಾರ್ವಜನಿಕರಿಗೆ ಯಾವುದೇ ರೀತಿಯ ಗೊಂದಲಗಳಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಎಸ್ಪಿ ಬಿ.ಎಸ್.ನೇಮಗೌಡ ಮಾತನಾಡಿ, ಆ.15 ರಂದು ಸಂಜೆ ನಗರದ ಭೀಮಸೇನ ಜೋಶಿ ರಂಗಮಂದಿರದಲ್ಲಿ ಪೊಲೀಸ್ ಇಲಾಖೆಯಿಂದ ಸಂಗೀತ ಸಂಜೆ ಕಾರ್ಯಕ್ರಮ ಜರುಗಲಿದೆ. ಎಲ್ಲ ಇಲಾಖೆಯ ಅಧಿಕಾರಿಗಳು ಆಗಮಿಸಿ ಸಂಗೀತ ಸಂಜೆ ಕಾರ್ಯಕ್ರಮ ವೀಕ್ಷಿಸಬೇಕೆಂದು ತಿಳಿಸಿದರು.ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಎನ್.ಸಿ.ಸಿ.,ಎನ್.ಎಸ್.ಎಸ್ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ, ಮೈಕಿಂಗ್ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ.ಎಂ., ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರವಿ ಗುಂಜೀಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ.ಬಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಸ್. ಬಾರಾಟಕ್ಕೆ, ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಪ್ಪ ಕುರ್ತಕೋಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.