ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಿ

| Published : Mar 07 2024, 01:52 AM IST

ಸಾರಾಂಶ

ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯತಿ ಇಒ ರಾಮರಡ್ಡಿ ಪಾಟೀಲ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕುರಿತು ಕ್ರಿಯಾ ಯೋಜನೆಯನ್ನು ತಯಾರಿಸಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಸ್ವೀಪ್ ಕಾರ್ಯಕ್ರಗಳನ್ನು ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತಿ ಇಒ ರಾಮರಡ್ಡಿ ಪಾಟೀಲ ಸೂಚಿಸಿದರು.

ನಗರದ ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಸ್ವೀಪ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆ ಕುರಿತು ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ವಿವಿಧ ಸರ್ಕಾರಿ ಇಲಾಖೆ ಸಿಬ್ಬಂದಿಗಳಿಂದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ವಿಶೇಷ ಚೇತನರಿಗೆ ಬೈಕ್ ಜಾಥಾ ಮೂಲಕ ಮತಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಮತದಾನದಂದು ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ ಶ್ಯಾಮಿಯಾನ ಮೂಲಕ ನೆರಳಿನ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ, ವಿಶೇಷ ಚೇತನರಿಗೆ ವೀಲ್ ಚೇರ್ ವ್ಯವಸ್ಥೆಯನ್ನು ಮಾಡಬೇಕೆಂದು ಹೇಳಿದರು.

ಸಭೆಯಲ್ಲಿ ಸಹಾಯಕ ನಿರ್ದೇಶಕ ಗಣೇಶ ಕೆ.ಎಸ್., ತಾಲೂಕು ಯೋಜನಾಧಿಕಾರಿ ಎನ್‌ ಎಸ್. ಹೂಗಾರ, ವ್ಯವಸ್ಥಾಪಕ ರಾಜೇಂದ್ರ ಮೊರಬದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.