ಮಾ.18ರಿಂದ ಏ.4ರವರೆಗೆ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಾ.18ರಿಂದ ಏ.4ರವರೆಗೆ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳನ್ನು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚನೆ ನೀಡಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ದತೆ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಒಟ್ಟು 79 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಭದ್ರಾವತಿ 15, ಹೊಸನಗರ 7, ಸಾಗರ 9, ಶಿಕಾರಿಪುರ 11, ಶಿವಮೊಗ್ಗ 20, ಸೊರಬ 10 ಮತ್ತು ತೀರ್ಥಹಳ್ಳಿ 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಮಾಡಬೇಕು. ಹಾಗೂ ಒತ್ತಡ ರಹಿತ ವಾತಾವರಣವನ್ನು ನಿರ್ಮಿಸಬೇಕು. ಎಲ್ಲಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಪೂರ್ವಭಾವಿಯಾಗಿ ಡ್ರೈರನ್ ನಡೆಸಲಾಗಿದ್ದು, ಮತ್ತೊಮ್ಮೆ ಇಂಟರ್‌ನೆಟ್ ವ್ಯವಸ್ಥೆ, ಯುಪಿಎಸ್ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ನವರು ಒದಗಿಸುವಂತೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಾದ ಪೊಲೀಸ್ ಬಂದೋಬಸ್ತ್ಗೆ ಮನವಿ ಮಾಡಲಾಗಿದ್ದು, ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಆದೇಶಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರುವಂತಿಲ್ಲ. ಈ ಬಗ್ಗೆ ಸೂಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ಆಗದಂತೆ ಪಾರದರ್ಶಕವಾಗಿ ಪರೀಕ್ಷೆಗಳು ನಡೆಯುವಂತೆ ಎಲ್ಲ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಜಿಪಂ ಸಿಇಒ ಎನ್‌.ಹೇಮಂತ್ ಮಾತನಾಡಿ, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಹಬ್ಬದ ಈ ದಿನಗಳಲ್ಲಿ ಸೂಕ್ತ ಆಹಾರ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ನಿದ್ರೆಗೆಡದೆ, ಸಾಕಷ್ಟು ನಿದ್ರೆ ಮಾಡಬೇಕು. ಯಾವುದೇ ರೀತಿಯ ಆತಂಕ, ಭಯಕ್ಕೆ ಒಳಗಾಗದೇ ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಯುಪಿಎಸ್, ಇಂಟರ್‌ನೆಟ್ ಇತರೆ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಂದ ದೂರ ಇರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕು ಮಟ್ಟದಿಂದ ಹಿಡಿದು ಎಲ್ಲ ಪರೀಕ್ಷಾ ನಿಯೋಜಿತ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಹಾಜರಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ., ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಯಟ್ ಪ್ರಾಂಶುಪಾಲ ಕೃಷ್ಣಮೂರ್ತಿ, ಡಿಡಿಪಿಐ ಮಂಜುನಾಥ್, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯ

ದ್ವಿಚಕ್ರ ವಾಹನ ಓಡಿಸುವ ಪ್ರತಿಯೊಬ್ಬ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಅರ್ಧ ಹೆಲ್ಮೆಟ್ ಬಳಸದೇ, ಪೂರ್ತಿ ಮತ್ತು ಸುರಕ್ಷಿತವಾದ ಹೆಲ್ಮೆಟ್ ಧರಿಸಬೇಕು. ಇದರಿಂದ ಅಪಘಾತದಲ್ಲಿ ಸಂಭವಿಸಬಹುದಾದ ಪ್ರಾಣಹಾನಿಯನ್ನು ತಡೆಯಬಹುದು. ಹಾಗೂ ಯಾವುದೇ ಕಾರಣಕ್ಕೂ ಮನೆಯಲ್ಲಿ ಲೈಸೆನ್ಸ್ ಇಲ್ಲದ ಮಕ್ಕಳಿಗೆ ವಾಹನವನ್ನು ಕೊಡಬಾರದು. ವಾಹನ ಓಡಿಸುವಾಗ ಅಪ್ಪಿತಪ್ಪಿಯೂ ಮೊಬೈಲ್ ನಲ್ಲಿ ಮಾತನಾಡಬಾರದು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ನಾವೇ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ನಿಖಿಲ್ ಹೇಳಿದರು.