ಸಾರಾಂಶ
ಕನ್ನಡಪ್ರಭ ವಾರ್ತೆ ನಾಗಮಂಗಲ
ಬಿಜೆಪಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಷ್ಟ್ರಮಟ್ಟದ ಚಿಂತನೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಒಬಿಸಿ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯ ನರಸಿಂಹಮೂರ್ತಿಜೀಗೌಡ ತಿಳಿಸಿದರು.ಪಟ್ಟಣದ ತಾಲೂಕು ಆಡಳಿತದ ಸೌಧದ ಮುಂಭಾಗದಲ್ಲಿ ತಾಲೂಕು ಬಿಜೆಪಿ ಘಟಕದಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದ ಹಲವು ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಜನರು ಸ್ವಪ್ರೇರಣೆಯಿಂದ ಬಿಜೆಪಿ ಪಕ್ಷದ ಸದಸ್ಯತ್ವ ಪಡೆಯಲು ಮುಂದಾಗುತ್ತಿದ್ದಾರೆ ಎಂದರು.
ಬಿಜೆಪಿ ಪಕ್ಷ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿದ್ದು, ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ 1.75ಲಕ್ಷ ಸದಸ್ಯರಿದ್ದಾರೆ. ಆದರೆ, ತಾಲೂಕಿನಲ್ಲಿ ಈವರೆಗೆ ಕೇವಲ 5ಸಾವಿರ ಸದಸ್ಯತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಸದಸ್ಯತ್ವ ಸಂಖ್ಯೆಯನ್ನು ವಾರದೊಳಗೆ 10ಸಾವಿರಕ್ಕೇರಿಸಬೇಕೆಂಬ ಉದ್ದೇಶದಿಂದ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದರು.ಬಿಜೆಪಿ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸದಸ್ಯತ್ವ ಪಡೆದುಕೊಳ್ಳಲು ಇಚ್ಛಿಸುವವರಿಗೆ ಮುಕ್ತ ಸ್ವಾಗತವಿದೆ. ನಮಗೆ ವ್ಯಕ್ತಿಗಿಂತ ಪಕ್ಷವೇ ಮುಖ್ಯ. ಪಕ್ಷಕ್ಕೆ ಯಾರೇ ಬರಲಿ ಯಾರೇ ಹೊರ ಹೋಗಲಿ ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರನ್ನು ಜರಿದರು.
ಬಿಜೆಪಿ ಪಕ್ಷದ ಮೂಲ ಹಾಗೂ ನಿಷ್ಠಾವಂತ ಕಾರ್ಯಕರ್ತರ ಜೊತೆಗಿದ್ದು ತಳಮಟ್ಟದಿಂದ ಪಕ್ಷವನ್ನು ಬಲಿಷ್ಟಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಇದೇ ವೇಳೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾಕರ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತುಳಸಿ ವಿನೋದ್, ಉಪಾಧ್ಯಕ್ಷ ವೆಂಕಟೇಶ್, ಜಿಲ್ಲಾ ಒಬಿಸಿ ಉಪಾಧ್ಯಕ್ಷ ಮಲ್ಲೇಗೌಡ, ನಗರ ಘಟಕದ ಅಧ್ಯಕ್ಷ ಸಂತೋಷ್, ಚಂಚಾಲಕ ಶಿವನಂಜೇಗೌಡ, ನಂಜುಂಡಪ್ಪ ಸೇರಿದಂತೆ ಹಲವರು ಇದ್ದರು.