ಹರಪನಹಳ್ಳಿ: ರೈತ ನಾಯಕ, ಹುಟ್ಟು ಹೋರಾಟಗಾರ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ಜನ ಸೇವೆಯ ಅಂಗವಾಗಿ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕೆಂದು ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ತಿಳಿಸಿದರು.ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ತಮ್ಮ ಆಡಳಿತದಲ್ಲಿ ಕರ್ನಾಟಕ ಇತಿಹಾಸದಲ್ಲಿಯೇ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿ ಸದಾ ರೈತರ ಪರವಾದ ನಿಲುವು ಹೊಂದಿದ್ದರು ಎಂದರು.
ಬಿಜೆಪಿಯನ್ನು ಕಟ್ಟಿ ಬೆಳೆಸಿ ದಕ್ಷಿಣ ಭಾರತದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಹೋರಾಟದ ದಿನಗಳನ್ನು ನೆನಪಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಕೆ.ಶೇಖರಪ್ಪ, ಮುಖಂಡರಾದ ಬಾಗಳಿ ಕೊಟ್ರೇಶಪ್ಪ, ಎಂ.ಮಲ್ಲೇಶ, ಪ್ರಸನ್ನ, ಜಾಥಪ್ಪ, ಕಲ್ಲನಗೌಡ, ಮನೋಜ್, ಸಿದ್ದೇಶ ಸೇರಿದಂತೆ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.ಹರಪನಹಳ್ಳಿ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಜಿ.ಕರುಣಾಕರ ರೆಡ್ಡಿ ಮಾತನಾಡಿದರು.