ಸಾರಾಂಶ
ಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಕ್ರಮ । ಜಿಲ್ಲಾ ಪಂಚಾತಿಯಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಕನ್ನಡಪ್ರಭ ವಾರ್ತೆ ಕೊಪ್ಪಳಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಮಕ್ಕಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ್ದ ಮಕ್ಕಳ ರಕ್ಷಣಾ ನೀತಿ-2016 (ಪರಿಷ್ಕರಣೆ)-2023ರ ಹಾಗೂ ಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016 ಪರಿಷ್ಕರಣೆ-2023ರನ್ವಯ ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪೊಲೀಸ್ ಪರಿಶೀಲನೆ ನಡೆಸಬೇಕು. ಸಂಸ್ಥೆಯು ಸಿಸಿಟಿವಿಯ ಕಣ್ಗಾವಲಿನಲ್ಲಿ ಇರಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಬದ್ಧತಾ ಪತ್ರ ಪಡೆಯಬೇಕು. ಮಕ್ಕಳ ಸಲಹಾ ಪೆಟ್ಟಿಗೆಯನ್ನು ಸ್ಥಾಪಿಸಿ, ಮಕ್ಕಳ ದೂರು, ಸಲಹೆಗಳನ್ನು ಪರಿಗಣಿಸಬೇಕು. ಮಕ್ಕಳ ರಕ್ಷಣಾ ಸಮಿತಿ ರಚಿಸಬೇಕು. ಶೈಕ್ಷಣಿಕ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ತಪ್ಪಿದ್ದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಗಳನ್ನು ಜರುಗಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ದೇಶದಲ್ಲಿಯೇ ಪ್ರಥಮವಾಗಿ ಮಕ್ಕಳ ಸುರಕ್ಷತಾ ನೀತಿಯನ್ನು ಅನುಷ್ಠಾನಗೊಳಿಸಿದ ರಾಜ್ಯ ಕರ್ನಾಟಕವಾಗಿದೆ. ಮಕ್ಕಳ ಸುರಕ್ಷತಾ ನೀತಿಯನ್ವಯ ರಾಜ್ಯದಲ್ಲಿನ ಪ್ರತಿ ಮಗು ಸುರಕ್ಷಿತ, ರಕ್ಷಣಾತ್ಮಕ ಮತ್ತು ಸಂರಕ್ಷಿತ ಪರಿಸರದಲ್ಲಿ ಬೆಳೆಯುವುದರೊಂದಿಗೆ, ಮಗುವಿನ ಸರ್ವಾಂಗೀಣ ಅಭಿವೃದ್ದಿಗೆ ಹಾಗೂ ಮಗು ತನ್ನ ಸಾಮರ್ಥ್ಯವನ್ನು ತಲುಪಲು ಅವಕಾಶಗಳನ್ನು ಒದಗಿಸುತ್ತದೆ ಎಂದರು.ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾದ ಡಾ. ಕೆ. ರಾಘವೇಂದ್ರ ಭಟ್, ಹರೀಶ ಜೋಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಗದೀಶ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಡಾ. ಸುಮಲತಾ ಆಕಳವಾಡಿ, ಶಿವಲೀಲಾ ವನ್ನೂರು, ಪ್ರತಿಭಾ, ಪ್ರಶಾಂತ ರಡ್ಡಿ, ಜಿಲ್ಲೆಯ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು ಭಾಗವಹಿಸಿದ್ದರು.