ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಇಲ್ಲಿನ ವಲಯ ಅರಣ್ಯ ಇಲಾಖೆಯಿಂದ ಕಾಡಂಚಿನ ಗ್ರಾಮಗಳ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರ ವಿತರಿಸಲಾಯಿತು. ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಸಕ ಡಾ. ಮಂತರ್ ಗೌಡ ಅರಣ್ಯ ಇಲಾಖೆಯಿಂದ ಗುರುತಿಸಲ್ಪಟ್ಟ ರೈತರಿಗೆ ಹಾಗೂ ಕಾಡಂಚಿನಲ್ಲಿ ವಾಸಿಸುತ್ತಿರುವ ಮಹಿಳೆಯರಿಗೆ ಉಚಿತವಾಗಿ ನೀಡುತ್ತಿರುವ ಹೊಲಿಗೆ ಯಂತ್ರ, ಜೇನು ಪೆಟ್ಟಿಗೆ, ಜೇನು ತೆಗೆಯುವ ಯಂತ್ರಗಳನ್ನು ವಿತರಿಸಿದರು. ನಂತರ ಮಾತನಾಡಿ, ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಸೂಕ್ತ ಫಲಾನುಭವಿಗಳನ್ನು ಆಯ್ಕೆ ಮಾಡಿ ನೀಡಬೇಕು. ಯೋಜನೆಗಳನ್ನು ಪಡೆದ ಜನರು ಅದನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು.ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೃಷ್ಣಮೂರ್ತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್‌ಎಫ್‌ಒ ಶೈಲೇಂದ್ರಕುಮಾರ್, ಶನಿವಾರಸಂತೆ ಪೂಜಾಶ್ರೀ, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.