ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ತರಬೇತಿ ನೀಡಬೇಕು. ಆನ್‌ಲೈನ್, ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳು ಯಾವುದಕ್ಕೆ ಹೆಚ್ಚು ಆಸಕ್ತಿ ತೋರುತ್ತಾರೋ ಅದನ್ನೇ ಮುಂದುವರಿಸಬೇಕು. ತರಬೇತಿ ಶಿಬಿರಕ್ಕೆ ಸಂಪೂರ್ಣವಾಗಿ ಬೆಂಬಲ ನೀಡಲಾಗಿದ್ದು, ಶಿಬಿರ ಯಶಸ್ವಿಯಾಗಲಿ.

ಕನ್ನಡ ಪ್ರಭ ವಾರ್ತೆ ಮಳವಳ್ಳಿ

ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಎಎಸ್, ಐಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೃಷಿ ಸಚಿವ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕೆಎಎಸ್, ಐಎಎಸ್, ವಿಎಒ, ಪಿಡಿಒ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಪ್ರಾಥಮಿಕ ಶಾಲೆಯಿಂದ ಪದವಿ ತರಗತಿಯವರೆವಿಗೂ ಶಿಕ್ಷಣಕ್ಕೆ ಬೇಕಾದ ಮೂಲ ಸೌಲಭ್ಯವನ್ನು ಸಮರ್ಪಕವಾಗಿ ಕಲ್ಪಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಪೂರ್ವ ತರಬೇತಿ ಶಿಬಿರ ನಡೆಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಎಲ್ಲರೂ ಒಗ್ಗೂಡಿ ತರಬೇತಿ ಶಿಬಿರವನ್ನು ಆಯೋಜನೆ ಮಾಡಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಎಂದರು.

ಗ್ರಾಮೀಣ ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ತರಬೇತಿ ನೀಡಬೇಕು. ಆನ್‌ಲೈನ್, ಆಫ್‌ಲೈನ್ ತರಗತಿಗಳಲ್ಲಿ ವಿದ್ಯಾರ್ಥಿಗಳು ಯಾವುದಕ್ಕೆ ಹೆಚ್ಚು ಆಸಕ್ತಿ ತೋರುತ್ತಾರೋ ಅದನ್ನೇ ಮುಂದುವರಿಸಬೇಕು. ತರಬೇತಿ ಶಿಬಿರಕ್ಕೆ ಸಂಪೂರ್ಣವಾಗಿ ಬೆಂಬಲ ನೀಡಲಾಗಿದ್ದು, ಶಿಬಿರ ಯಶಸ್ವಿಯಾಗಲಿ ಎಂದು ಆಶೀಸಿದರು.

ಇನ್ಸೈಟ್ ಸಂಸ್ಥಾಪಕರು ಮತ್ತು ನಿರ್ದೇಶಕ ವಿನಯ್‌ಕುಮಾರ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಪ್ರತಿ ನಿತ್ಯ ಪತ್ರಿಕೆ, ಸಾಹಿತ್ಯ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಹಾಗೂ ಸಾಹಿತ್ಯದ ಪುಸ್ತಕಗಳಿಂದ ಜ್ಞಾನದ ಶಕ್ತಿ ಬೆಳೆಯುತ್ತದೆ ಎನ್ನುವುದನ್ನು ಅರ್ಥಮಾಡಿಕೊಂಡು ಪರೀಕ್ಷೆ ಎದುರಿಸುವ ಮುನ್ನಾ ಯಾವ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕೆಂಬುದನ್ನು ನಿರ್ಧಾರ ಮಾಡಿ ಉತ್ತಮ ತರಬೇತಿ ಪಡೆದರೆ ಯಶಸ್ಸು ಸಾಧಿಸಬಹುದಾಗಿದೆ ಎಂದು ಭವಿಷ್ಯ ನುಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಲೋಕೇಶ್, ಡಿವೈಎಸ್ಪಿ ಯಶ್ವಂತಕುಮಾರ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವಿನೋದ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ, ಸಿಡಿಪಿಓ ನಂಜಮ್ಮಣಿ ಸೇರಿದಂತೆ ಇತರರಿದ್ದರು.