ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಜಿ.ಪಂ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿಟ್ಟೆ ಮಾಧವ್ ವಿಠ್ಠಲರಾವ್ ಹೇಳಿದರು.

ಕನ್ನಡಪ್ರಭ ವಾರ್ತೆ ಔರಾದ್

ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕೆಂದು ಜಿ.ಪಂ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿಟ್ಟೆ ಮಾಧವ್ ವಿಠ್ಠಲರಾವ್ ಹೇಳಿದರು.

ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ ಜಿ ರಾಮ್‌ ಜಿ ಯೋಜನೆಯಡಿ ನಡೆಯುತ್ತಿರುವ ಸಿಸಿಟಿ ಕಾಮಗಾರಿ ಗುರುವಾರ ಪರಿಶೀಲಿಸಿ ಮಾತನಾಡಿ, ಯಾರೂ ಗುಳೆ ಹೋಗಬೇಡಿ, ನಿಮ್ಮೂರಲ್ಲೇ ಕೆಲಸ ಮಾಡಿ. ವಿಬಿ–ಜಿ ರಾಮ್‌ಜಿ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 100ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನಕ್ಕೆ 382 ರು. ಕೂಲಿ ನೀಡಲಾಗುತ್ತಿದ್ದು, 125 ದಿನಗಳ ಉದ್ಯೋಗ ಪಡೆದ ಕುಟುಂಬವು ಗರಿಷ್ಠ 47,750 ರು. ಕೂಲಿ ಪಡೆಯಬಹುದಾಗಿದೆ ಎಂದು ತಿಳಿಸಿದರು.

ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲನೆ: ಇದಕ್ಕೂ ಮೊದಲು ಕಂದಗೂಳ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಜಲ ಜೀವನ್ ಮಿಷನ್ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಸ್ಥರಿಗೆ ಸಮರ್ಪಕ ಹಾಗೂ ಶುದ್ಧ ಕುಡಿಯುವ ನೀರು ದೊರೆಯುವಂತೆ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ, ಬೆಳವಣಿಗೆ ದಾಖಲಾತಿ ಹಾಗೂ ಸ್ವಚ್ಛತೆ ಪರಿಶೀಲಿಸಿದರು.

ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಇಒ: ವಡಗಾಂವ, ಜಂಬಗಿ ಹಾಗೂ ಸಂತಪೂರನ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳಿಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಹಾಜರಾತಿ, ವಸತಿ, ಆಹಾರ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ವಡಗಾಂವ, ಸಂತಪೂರ ಹಾಗೂ ಜಂಬಗಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಶಾಲೆ ಸೇರಿದಂತೆ ವಿವಿಧ ಸಾರ್ವಜನಿಕ ಸೇವಾ ಕೇಂದ್ರಗಳಿಗೂ ಭೇಟಿ ನೀಡಿದ ಅವರು, ಸಿಬ್ಬಂದಿ ಹಾಜರಾತಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸೇವೆ ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.

ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಯಾವುದೇ ಲೋಪವಾಗಬಾರದು. ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವ ಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ತಾ.ಪಂ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ್ ಘಾಟೆ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎಇಇ ಮಾರುತಿ ರಾಠೋಡ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.